ನವದೆಹಲಿ, ಮಾ.15-ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಗೆ ಮುನ್ನ ಪ್ರತಿ ಕ್ಷೇತ್ರದಲ್ಲಿ ವಿದ್ಯುನ್ಮಾನ ಮತ ಯಂತ್ರಗಳ(ಇವಿಎಂಗಳ) ವಿವಿಪ್ಯಾಟ್(ಮತದಾರ ಪರಿಶೀಲನಾ ಕಾಗದ ಪರಿಶೋಧನೆ)ಗಳ ಸ್ಲಿಪ್ಗಳನ್ನು ಎಣಿಕೆ ಮಾಡಬೇಕೆಂದು ಕೋರಿರುವ ವಿರೋಧಪಕ್ಷಗಳ ನಾಯಕರ ಮನವಿಯನ್ನು ಸುಪ್ರೀಂಕೋರ್ಟ್ ಮಾನ್ಯ ಮಾಡಿದೆ.
ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ಇಂದು ನೋಟೀಸ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಯ್ ಹಾಗೂ ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಸಂಜೀವ್ ಖನ್ನಾ ಅವರನ್ನು ಒಳಗೊಂಡ ಪೀಠವು ಈ ವಿರೋಧ ಪಕ್ಷಗಳ ಮನವಿಯ ಮುಂದಿನ ವಿಚಾರಣೆಯನ್ನು ಮಾರ್ಚ್ 25ಕ್ಕೆ ನಿಗದಿಗೊಳಿಸಿದ್ದಾರೆ. ಈ ಬಗ್ಗೆ ಚರ್ಚೆಗಾಗಿ ನ್ಯಾಯಾಲಯಕ್ಕೆ ಅಧಿಕಾರಿಯೊಬ್ಬರನ್ನು ನಿಯೋಜಿಸುವಂತೆಯೂ ಆಯೋಗಕ್ಕೆ ನಿರ್ದೇಶನ ನೀದಿದೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ವಿರೋಧಪಕ್ಷಗಳ ನಾಯಕರು ಈ ಸಂಬಂಧ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಿದ್ದರು.