ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ ಸಂವಿಧಾನದ 370ನೇ ವಿಧಿ ರದ್ದತಿ ನಿಲುವಳಿಯನ್ನು ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಮಂಡಿಸಿದರು. ಇದಕ್ಕೆ ಪ್ರತಿಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಯಿತು.
‘ಆಂತರಿಕ ಭದ್ರತೆ, ಜಮ್ಮು ಮತ್ತು ಕಾಶ್ಮೀರ ಎದುರಿಸುತ್ತಿರುವ ಗಡಿಯಾಚೆಗಿನ ಭಯೋತ್ಪಾದನೆ ಗಮನದಲ್ಲಿಟ್ಟುಕೊಂಡು ರಾಜ್ಯವನ್ನು ವಿಧಾನಸಭೆ ಸಹಿತ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು. ಭೌಗೋಳಿಕವಾಗಿ ಭಿನ್ನವಾಗಿರುವ ಲಡಾಖ್‌ಗೆ ಕೇಂದ್ರಾಡಳಿತ ಸ್ಥಾನಮಾನ ನೀಡುವ ಕುರಿತ ಅಲ್ಲಿನ ಜನರ ಬೇಡಿಕೆ ದೀರ್ಘಾವಧಿಯಿಂದ ಬಾಕಿ ಇದೆ. ಹೀಗಾಗಿ ಲಡಾಖ್ ಅನ್ನು ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು’ ಎಂದೂ ಅಮಿತ್ ಶಾ ಪ್ರಸ್ತಾವ ಮಂಡಿಸಿದರು.
ಈ ನಿಲುವಳಿಯನ್ನು ಆಡಳಿತ ಪಕ್ಷದ ಸದಸ್ಯರು ಸ್ವಾಗತಿಸಿದರು. ಆದರೆ, ಪ್ರತಿಪಕ್ಷಗಳ ಸದಸ್ಯರು ‘ಸಂವಿಧಾನದ ಹತ್ಯೆ ಮಾಡಬೇಡಿ’ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ‘ಸಂವಿಧಾನಕ್ಕೆ ಬಿಜೆಪಿ ಇಂದು ಅಗೌರವ ತೋರಿದೆ. ನಮ್ಮ ದೇಶದ ಸಂವಿಧಾನದ ಪರವಾಗಿ ನಾವು ನಿಂತುಕೊಳ್ಳುತ್ತೇವೆ. ಸಂವಿಧಾನದ ಪ್ರತಿಯನ್ನು ಹರಿದುಹಾಕಲು ಯತ್ನಿಸಿದ ಪಿಡಿಪಿ ಸದಸ್ಯರ ಕ್ರಮವನ್ನು ಖಂಡಿಸುತ್ತೇವೆ. ಬಿಜೆಪಿ ಸಂವಿಧಾನದ ಕೊಲೆ ಮಾಡಿದೆ’ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದರು. ‘ನೀವು ಸ್ವತಃ ತುರ್ತುಸ್ಥಿತಿಯ ಪರಿಣಾಮ ಅನುಭವಿಸಿದ್ದೀರಿ. ಆದರೂ ನಿಮ್ಮ ವರ್ತನೆ ತುರ್ತುಸ್ಥಿತಿಯ ದಿನಗಳಿಗಿಂತ ಭಿನ್ನವಾಗಿಲ್ಲ’ ಎಂದು ಎಂಡಿಎಂಕೆ ನಾಯಕ ವೈಕೊ ಆಕ್ಷೇಪ ವ್ಯಕ್ತಪಡಿಸಿದರು.
‘ಇದು ಸಂವಿಧಾನದ ಕತ್ತಲ ದಿನ. ಕಾಶ್ಮೀರದ ಜನರಿಗೆ ಭಾರತೀಯರು ಕೊಟ್ಟಿದ್ದ ಮಾತನ್ನು ಹಿಂಪಡೆದ ದಿನ. ಸಂವಿಧಾನದ 370ನೇ ವಿಧಿಯನ್ನು ಹಿಂಪಡೆಯುವ ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರವು ಅನೈತಿಕ ಮತ್ತು ಸಂವಿಧಾನಬಾಹಿರ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತವು ಒಂದು ಆಕ್ರಮಣಕಾರಿ ಬಲವಾಗಿ ಉಳಿದುಕೊಳ್ಳಲಿದೆ. ಜಮ್ಮು ಮತ್ತು ಕಾಶ್ಮೀರದ ಜನರಲ್ಲಿ ಭೀತಿ ಹುಟ್ಟಿಸುವ ಮೂಲಕ ಅಲ್ಲಿನ ಭೂಪ್ರದೇಶವನ್ನು ವಶಪಡಿಸಿಕೊಳ್ಳಲು ಭಾರತ ಸರ್ಕಾರ ಮುಂದಾಗಿದೆ’ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಟ್ವೀಟ್ ಮಾಡಿದ್ದಾರೆ.
ಏನಿದು ಕಲಂ 370?:
ಜಮ್ಮು ಮತ್ತು ಕಾಶ್ಮೀರ ಭಾರತದ ಒಕ್ಕೂಟದಲ್ಲಿ ವಿಲೀನವಾಗಿದ್ದರ ಹಾಗೂ ಕಲಂ 370ರ ಹುಟ್ಟಿನ ಹಿಂದೆ ದೊಡ್ಡ ಇತಿಹಾಸವಿದೆ. 1947ರಲ್ಲಿ ಭಾರತ ಮತ್ತು ಪಾಕ್ ಸ್ವತಂತ್ರ ರಾಷ್ಟ್ರಗಳಾಗಿ ರೂಪಪಡೆದಿದ್ದರೂ ಕಾಶ್ಮೀರದ ರಾಜ ಹರಿಸಿಂಗ್ ಮಾತ್ರ ಯಾವ ರಾಷ್ಟ್ರದ ಜೊತೆಗೆ ಒಂದಾಗದೆ ಸ್ವತಂತ್ರ್ಯವಾಗಿ ಉಳಿಯುವ ಭಯಕೆಯನ್ನು ಹೊಂದಿದ್ದರು.
ಆದರೆ, ಕಣಿವೆ ರಾಜ್ಯದ ಮೇಲೆ 1947ರಲ್ಲಿ ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆಸಿದ್ದ ಸಂದರ್ಭದಲ್ಲಿ ರಾಜ ಹರಿಸಿಂಗ್ ಭಾರತದ ಸಹಕಾರ ಕೇಳುತ್ತಾರೆ. ಅಲ್ಲದೆ ಭಾರತದ ಜೊತೆ ವಿಲೀನಗೊಳ್ಳಲು ಒಪ್ಪಿ ಕೆಲವು ಷರತ್ತುಗಳನ್ನು ಮುಂದಿಡುತ್ತಾನೆ. ಹೀಗೆ ಹುಟ್ಟುಪಡೆದದ್ದೇ ಕಲಂ 370. ಕಾಲಾನಂತರದಲ್ಲಿ ಕಲಂ 35ಎ ನ್ನು ಸೇರ್ಪಡೆಗೊಳಿಸಲಾಯಿತು.
- ಸಂವಿಧಾನದ 370 ನೇ ವಿಧಿಯ ಪ್ರಕಾರ ಜಮ್ಮು-ಕಾಶ್ಮೀರಕ್ಕೆ ಆರು ವಿಶೇಷ ಸವಲತ್ತುಗಳನ್ನು, ಉಪಕ್ರಮಗಳನ್ನು ಹಾಗೂ ವಿನಾಯಿತಿಗಳನ್ನು ನೀಡಲಾಗಿದೆ.
- ಜಮ್ಮು ಮತ್ತು ಕಾಶ್ಮೀರ ಭಾರತ ಗಣರಾಜ್ಯದ ಅಂಗವಾದರೂ ಪ್ರತ್ಯೇಕ ಸಂವಿಧಾನವನ್ನು ಹೊಂದಬಹುದು.
- ರಕ್ಷಣೆ, ಹಣಕಾಸು, ವಿದೇಶಾಂಗ ವ್ಯವಹಾರ ಹಾಗೂ ಸಂಪರ್ಕ ಈ ಖಾತೆಗಳಿಗೆ ಮಾತ್ರ ಭಾರತದ ಕಾನೂನು ಹಾಗೂ ಸಂವಿಧಾನ ಕಾಶ್ಮೀರಕ್ಕೆ ಅನ್ವಯವಾಗುತ್ತದೆ.
- ಭಾರತದ ಸಂವಿಧಾನದ ಎಲ್ಲಾ ವಿಧಿ-ವಿಧಾನಗಳನ್ನು ಅನುಷ್ಠಾನಗೊಳಿಸಬೇಕು ಎಂದರೆ ಜಮ್ಮು-ಕಾಶ್ಮೀರದ ಅನುಮತಿ ಪಡೆಯಬೇಕು
- ಜಮ್ಮು-ಕಾಶ್ಮೀರ ಭಾರತದೊಳಗೆ ವಿಲೀನಗೊಳಿಸಬೇಕೆಂದು ರಾಜ್ಯ ಸರಕಾರ ನಿರ್ಧರಿಸಿದರೆ, ತನ್ನ ಸಂವಿಧಾನಕ್ಕೆ ತಿದ್ದುಪಡಿ ಮಾಡಿ ವಿಧಾನಸಭೆಯ ಮುಂದೆ ಮಂಡಿಸಬೇಕು.
- ವಿಧಾನಸಭೆ ಅದಕ್ಕೆ ಅನುಮೋದನೆ ನೀಡಿದರೆ ಅದನ್ನು ಮಧ್ಯಂತರ ಅಧಿಕಾರ ಎಂದು ಪರಿಗಣಿಸಲಾಗುವುದು. ಅಂದರೆ ವಿಲೀನಗೊಳಿಸುವ ಪರಮಾಧಿಕಾರ ಅಲ್ಲಿನ ವಿಧಾನಸಭೆಗೂ ಇಲ್ಲ ಅಂದಂಗಾಯಿತು.
- ರಾಷ್ಟ್ರಪತಿ ಏನಾದರು ಈ ವಿಧಿಯನ್ನು ರದ್ದುಗೊಳಿಸಿ ಭಾರತದೊಳಗೆ ಜಮ್ಮು-ಕಾಶ್ಮೀರವನ್ನು ವಿಲೀನಗೊಳಿಸುವುದಕ್ಕೆ ಮುಂದಾದರೆ ರಾಜ್ಯ ಸರಕಾರದ ಶಿಫಾರಸು ಅಗತ್ಯ.
ಹೀಗೆ ಕಲಂ 370 ರ ಅಡಿಯಲ್ಲಿ ಆರು ಪ್ರಮುಖ ಸವಲತ್ತುಗಳನ್ನು ಸಂವಿಧಾನದ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದೆ. ಇದಲ್ಲದೆ ಕಲಂ 35(ಎ) ಅಡಿಯಲ್ಲಿ.
- ಭಾರತ ಸರಕಾರದ ಕಾಯ್ದೆ ತಿದ್ದುಪಡಿಗಳು ಕಣಿವೆ ರಾಜ್ಯಕ್ಕೆ ಸಂಬಂಧಿಸುವುದಿಲ್ಲ.
- ಕಾಶ್ಮೀರಿಗಳಿಗೆ ಮೂಲ ಹಾಗೂ ಶಾಶ್ವತ ನಿವಾಸಿಗಳು ಎಂಬ ಗುರುತು.
- ಈ ಕಾನೂನಿನ ಅನ್ವಯ ಕಾಶ್ಮೀರದ ಮೂಲ ನಿವಾಸಿಗಳ ಹೊರತಾಗಿ ಬೇರೆ ಯಾರೂ ಕಣಿವೆ ರಾಜ್ಯದಲ್ಲಿ ಸ್ಥರಾಸ್ತಿ ಚರಾಸ್ತಿಗಳನ್ನು ಹೊಂದುವ ಹಕ್ಕಿಲ್ಲ.
- ಹೊರ ರಾಜ್ಯದವರು ಕಾಶ್ಮೀರದಲ್ಲಿ ಶಾಶ್ವತವಾಗಿ ನೆಲೆಸುವಂತಿಲ್ಲ.
- ಹೊರ ರಾಜ್ಯದ ವಿದ್ಯಾರ್ಥಿಗಳು ರಾಜ್ಯ ಸರಕಾರ ನಡೆಸುವ ವೃತ್ತಿಪರ ಕೋರ್ಸ್ ಹಾಗೂ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಪಡೆಯುವಂತಿಲ್ಲ. ಹಾಗೂ ಸರಕಾರದ ವಿದ್ಯಾರ್ಥಿ ವೇತನ ಪಡೆಯುವಂತಿಲ್ಲ.
- ರಾಜ್ಯ ಸರಕಾರದ ಹುದ್ದೆಗಳಲ್ಲಿ ಬೇರೆ ರಾಜ್ಯದವರಿಗೆ ಅವಕಾಶವಿಲ್ಲ.
- ಬೇರೆ ರಾಜ್ಯದವರು ಇಲ್ಲಿ ಚುನಾವಣೆಗೆ ಸ್ಫರ್ಧಿಸುವಂತಿಲ್ಲ.
ಈ ಎಲ್ಲಾ ಸವಲತ್ತುಗಳು ಕೇವಲ ಕಾಶ್ಮೀರದ ಮೂಲ ಹಾಗೂ ಶಾಶ್ವತ ನಿವಾಸಿಗಳಿಗೆ ಮಾತ್ರ ಕಲ್ಪಿಸಲಾಗಿದೆ. ಇದಕ್ಕೆ ಸಂವಿಧಾನದ ಕಲಂ 370 ಹಾಗೂ 45 (ಎ) ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಭಿವೃದ್ಧಿಯ ದೃಷ್ಟಿಕೋನದಲ್ಲಿ ತೀರಾ ಹಿಂದುಳಿದಿರುವ ಕಾರಣ ಜಮ್ಮು-ಕಾಶ್ಮೀರಕ್ಕೆ ಸಂವಿಧಾನ ಬದ್ಧವಾಗಿ ಈ ಸವಲತ್ತುಗಳನ್ನು ನೀಡಲಾಗಿದೆ.
ಕಾಶ್ಮೀರ ಮಾತ್ರವಲ್ಲದೆ 371(ಎ) ವಿಧಿಯ ಅಡಿಯಲ್ಲಿ ನಾಗಾಲ್ಯಾಂಡ್, 371(ಜಿ) ವಿಧಿಯ ಅನ್ವಯ ಮಿಝೋರಾಮ್ ರಾಜ್ಯಗಳಿಗೂ ಸಹ ಇದೇ ರೀತಿಯ ವಿಶೇಷ ಸ್ಥಾನಮಾನಗಳನ್ನು ಕಲ್ಪಿಸಲಾಗಿದೆ. ಈ ರಾಜ್ಯಗಳಿಗಿರುವ ಇತಿಹಾಸದ ಕಾರಣಕ್ಕಾಗಿಯೇ ಈ ವಿಶೇಷ ಸವಲತ್ತುಗಳನ್ನು ನೀಡಲಾಗಿರುವುದು ಉಲ್ಲೇಖಾರ್ಹ.
ಆದರೆ, ಜಮ್ಮು-ಕಾಶ್ಮೀರದ ಗಡಿ ಭಾಗಗಳಲ್ಲಿ ಜನಸಾಮಾನ್ಯರು ಹಾಗೂ ಗಡಿ ಭದ್ರತಾ ಪಡೆಗಳ ನಡುವಿನ ನಿರಂತರ ಚಕಮಕಿಯ ಕಾರಣದಿಂದಾಗಿಯೇ ಕಲಂ 370 ಹಾಗೂ 35(ಎ) ತಿದ್ದುಪಡಿ ತರಬೇಕು ಎಂಬ ಕೂಗು ಬಲವಾಗಿಯೇ ಕೇಳಿಬರುತ್ತಿತ್ತು. ಈ ಕುರಿತು ಸಾಕಷ್ಟು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ದಾಖಲಾಗಿವೆ, ಆದರೆ, ಇದೀಗ ಈ ಕೂಗಿಗೆ ರಾಜಕೀಯ ಬಣ್ಣವೂ ಪ್ರಾಪ್ತಿಯಾಗಿದ್ದು, ಈ ಕಾಯ್ದೆಯನ್ನು ರದ್ದುಪಡಿಸುವುದಾಗಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಆಶ್ವಾಸನೆಯಂತೆ ಕಾರ್ಯರೂಪಕ್ಕೂ ಮುಂದಾಗಿದೆ.
ಆದರೆ, ಕಲಂ 370ನ್ನು ರದ್ದುಗೊಳಿಸಿದರೆ ಕಣಿವೆ ರಾಜ್ಯದಲ್ಲಿ ಗಲಭೆಗಳು ಭುಗಿಲೇಳುವ ಸಾಧ್ಯತೆಗಳೂ ಇದೆ, ಅಲ್ಲದೆ ಸ್ವತಂತ್ರ್ಯ ರಾಷ್ಟ್ರದ ಕೂಗಿಗೆ ಪ್ರತ್ಯೇಕತಾವಾದಿಗಳ ಕಾರ್ಯಾಚರಣೆಗೆ ಮತ್ತಷ್ಟು ಬಲಗೊಳ್ಳಲಿದೆ ಎಂದೂ ಹೇಳಲಾಗುತ್ತಿದೆ. ಈ ನಡುವೆ ಕಣಿವೆ ರಾಜ್ಯದಲ್ಲಿ ಪ್ರಸ್ತುತ ಯುದ್ಧದ ವಾತಾವರಣವೇ ನಿರ್ಮಾಣವಾಗಿದ್ದು, ಈ ಸೂಕ್ಷ್ಮ ವಿಚಾರವನ್ನು ಕೇಂದ್ರ ಸರ್ಕಾರ ಹೇಗೆ ನಿಭಾಯಿಸಲಿದೆ ಎಂಬುದನ್ನು ನಂತರದ ದಿನಗಳು ಸ್ಪಷ್ಟಪಡಿಸಲಿವೆ.






