janadhvani

Kannada Online News Paper

ಶೀಘ್ರವೇ ಜಮ್ಮು, ಕಾಶ್ಮೀರದಲ್ಲಿ ಸಹಜ ಸ್ಥಿತಿ ನಿರ್ಮಾಣವಾಗಲಿ- ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌

ನವದೆಹಲಿ: 370ನೇ ವಿಧಿ ರದ್ದತಿ ಬಳಿಕ ತಲೆದೋರಿರುವ ಪ್ರಕ್ಷುಬ್ಧತೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಶೀಘ್ರವೇ ಸಹಜ ವಾತಾವರಣ ತರಲು ಸಕಲ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ಸೂಚನೆ ನೀಡಿದೆ.

ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಂದಿನ ಕ್ರಮವಹಿಸಿ. ಜಮ್ಮು ಮತ್ತು ಕಾಶ್ಮೀರದಲ್ಲಿ ಸಹಜ ಸ್ಥಿತಿ ಮರಳಲು ಎಲ್ಲ ಪ್ರಯತ್ನ ನಡೆಸುವಂತೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು ಹೇಳಿದೆ.

ಆಗಸ್ಟ್‌ನಲ್ಲಿ 370ನೇ ವಿಧಿ ರದ್ದತಿ ನಿರ್ಣಯದೊಂದಿಗೆ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಿರ್ಬಂಧ ವಿಧಿಸಿದ ನಂತರದಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

‘ಒಂದೇ ಒಂದು ಗುಂಡು ಸಹ ಸಿಡಿಸಿಲ್ಲ, ಯಾವುದೇ ಜೀವಹಾನಿಯಾಗಿಲ್ಲ. 93 ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಿರ್ಬಂಧ ಸಡಿಸಲಾಗಿದೆ ಹಾಗೂ ಲಡಾಕ್‌ನಲ್ಲಿ ಯಾವುದೇ ನಿರ್ಬಂಧ ವಿಧಿಸಲಾಗಿಲ್ಲ. ಆಸ್ಪತ್ರೆಗಳು, ಔಷಧಿ ಅಂಗಡಿಗಳು ಮತ್ತು ಸಾರ್ವಜನಿಕ ವಿತರಣಾ ಕೇಂದ್ರಗಳು ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿವೆ‘ ಎಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಕೋರ್ಟ್‌ಗೆ ತಿಳಿಸಿದರು.

ಕಾಶ್ಮೀರ ಮೂಲದ ಎಲ್ಲ ಸುದ್ದಿ ಪತ್ರಿಕೆಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.

error: Content is protected !! Not allowed copy content from janadhvani.com