ಬೆಂಗಳೂರು ,ಸೆ. 25: ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್, ರಾಜ್ಯ ಸರ್ಕಾರದ ವಿರುದ್ಧ ನಿನ್ನೆ ಅವಿಶ್ವಾಸ ನಿರ್ಣಯ ಮಂಡಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಆರು ತಿಂಗಳಿಗೊಮ್ಮೆ ಕಾಂಗ್ರೆಸ್ ನವರು ಹೀಗೇ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತಿರಲಿ. ಹೀಗೆ ಮಾಡುವುದರಿಂದ ನನಗೆ ಆರು ತಿಂಗಳ ಕಾಲ ವಿಶ್ವಾಸ ಬರುತ್ತದೆ ಎಂದು ತಿರುಗೇಟು ನೀಡಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಗುರುವಾರ ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿತ್ತು. ಇದಕ್ಕೆ ಕಾಂಗ್ರೆಸ್ನ 23 ಶಾಸಕರು ಬೆಂಬಲ ಸೂಚಿಸಿದ್ದರು. ಈ ಬಗ್ಗೆ ಇಂದು ಸದನದಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.
ಈ ಬಗ್ಗೆ ಕಾಂಗ್ರೆಸ್ಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕಾಂಗ್ರೆಸ್ನವರು ನನಗೆ ವಿಶ್ವಾಸ ಮೂಡಿಸೋ ಕೆಲಸ ಮಾಡುತ್ತಿದ್ದಾರೆ. ಅವರು ಪ್ರತಿ 6 ತಿಂಗಳಿಗೊಮ್ಮೆ ಹೀಗೆ ಅವಿಶ್ವಾಸ ನಿರ್ಣಯ ಮಂಡನೆ ಮಾಡುತ್ತಿದ್ದರೆ ನನಗೆ ಸರ್ಕಾರದ ಮೇಲೆ ವಿಶ್ವಾಸ ಬರುತ್ತದೆ ಎಂದಿದ್ದಾರೆ.
ಮಂತ್ರಿ ಮಂಡಲದ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವಿಶ್ವಾಸ ಮಂಡನೆಗೆ ನೋಟೀಸ್ ಕೊಟ್ಟಿದ್ದರು. ಬಳಿಕ ನಿನ್ನೆ ಸಂಜೆ ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಅವಿಶ್ವಾಸ ನಿರ್ಣಯ ಮಂಡನೆ ಹಿನ್ನೆಲೆಯಲ್ಲಿ ಯಾವುದೇ ಬಿಲ್ ಪಾಸ್ ಮಾಡದಂತೆ ಸಿದ್ದರಾಮಯ್ಯ ಒತ್ತಾಯ ಮಾಡಿದ್ದರು.