janadhvani

Kannada Online News Paper

ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ, ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಪ್ರಮೋಷನ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್19 ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಇದೇ ವೇಳೆ ಮೊದಲ ವರ್ಷದ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದು ಮಾಡಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು.

ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಮೊದಲನೆ ಪಿಯು ವಿದ್ಯಾರ್ಥಿಗಳಿಗೆ ಪ್ರಮೋಷನ್: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸ್ಗಳನ್ನು ನಡೆಸಲಾಗುತ್ತದೆ. ಹಾಗೆಯೇ ಇಲಾಖೆಯ ಯೂ-ಟ್ಯೂಬ್ ಚಾನಲ್ಗಳ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಅವರು ತಿಳಿಸಿದರು.

ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ: ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಉಪನ್ಯಾಸಕರು ವರ್ಕ್ ಫ್ರಂ ಹೋಂ ಕೆಲಸ ಮಾಡಲು ಸೂಚಿಸಲಾಗಿದೆ.

ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ, ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲಾ ಆಡಳಿತಾತ್ಮಕ ಕ್ರಮಗಳಗೆ ಅವರು ಸದಾ ಲಭ್ಯವಾಗಬೇಕಿದೆ. ಹಾಗೆಯೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳನ್ನು ಪೂರೈಸಬೇಕಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಮೇ 24ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು.

ಈ ಬಾರಿ 5,92,816 ಹೊಸ ವಿದ್ಯಾರ್ಥಿಗಳು, 76,422 ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 17,470 ಖಾಸಗಿ ಅಭ್ಯರ್ಥಿಗಳು ಸೇರಿ 68,6708 ಅಭ್ಯರ್ಥಿಗಳು ಈ ಬಾರಿ ಪರೀಕ್ಷೆ ತೆಗೆದುಕೊಂಡಿದ್ದರು.

error: Content is protected !! Not allowed copy content from janadhvani.com