janadhvani

Kannada Online News Paper

ತೌಕ್ತೆ ಚಂಡಮಾರುತ: ದಕ್ಷಿಣ ಕನ್ನಡ, ಉಡುಪಿ ಸಹಿತ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬೆಂಗಳೂರು,ಮೇ.15: ಇಂದು ಕರ್ನಾಟಕಕ್ಕೆ ತೌಕ್ತೆ ಚಂಡಮಾರುತ ಆಗಮಿಸುವ ಹಿನ್ನೆಲೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಉಡುಪಿ ಸುತ್ತಮುತ್ತ ಬೆಳಗ್ಗೆಯಿಂದಲೇ ಮಳೆ ಶುರುವಾಗಿದೆ. ತೌಕ್ತೆ ಚಂಡಮಾರುತದ ಹಿನ್ನೆಲೆಯಲ್ಲಿ ಇಂದಿನಿಂದ ಮೇ 17ರವರೆಗೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಗಾಲದ ವಾತಾವರಣ ನಿರ್ಮಾಣವಾಗಿದ್ದು, ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಚಂಡಮಾರುತದ ಪರಿಣಾಮದಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಲಾಶಯಗಳು, ನದಿ ದಂಡೆಗಳ ಪಕ್ಕದಲ್ಲಿರುವ ನಿವಾಸಿಗಳು ಹೆಚ್ಚಿನ ಎಚ್ಚರ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಇಂದು ಮತ್ತು ನಾಳೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಾಳೆ ದಕ್ಷಿಣ ಭಾರತಕ್ಕೆ ತೌಕ್ತೆ ಚಂಡಮಾರುತ ಆಗಮನವಾಗಲಿದೆ. ಇಂದಿನಿಂದ 2 ದಿನ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಇಂದು ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮೇ 17ರವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು, ನಾಳೆ ಮತ್ತು 17ರಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಮೇ 16ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ತೀರಕ್ಕೆ ಈ ವರ್ಷದ ಮೊದಲ ಚಂಡಮಾರುತ ಅಪ್ಪಳಿಸಲಿದ್ದು, ಇದಕ್ಕೆ ತೌಕ್ತೆ ಚಂಡಮಾರುತ ಎಂದು ಹೆಸರಿಡಲಾಗಿದೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಚಂಡಮಾರುತ ಅಬ್ಬರಿಸಲಿದೆ. ಹೀಗಾಗಿ, ಮುಂದಿನ 1 ವಾರಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಕೊಡಗಿನಲ್ಲಿ ಇಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಮಡಿಕೇರಿ ನಗರದ ಚಾಮುಂಡೇಶ್ವರಿ ನಗರ ಮತ್ತು ಇಂದಿರಾನಗರದ ನಿವಾಸಿಗಳು ತಾತ್ಕಾಲಿಕವಾಗಿ ಮನೆಗಳನ್ನು ಖಾಲಿ ಮಾಡಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮಡಿಕೇರಿ ನಗರ ಸಭೆ ನೊಟೀಸ್ ನೀಡಿದೆ. ಇಂದಿರಾ ನಗರ ಮತ್ತು ಚಾಮುಂಡೇಶ್ವರಿ ನಗರದ 128ಕ್ಕೂ ಹೆಚ್ಚು ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಮೇ 14 ಮತ್ತು 15ರಂದು ಚಂಡಮಾರುತದ ಪರಿಣಾಮವಾಗಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಹೀಗಾಗಿ ಜನರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ನೋಟಿಸ್ ನೀಡಿದೆ.

ಅರಬ್ಬಿ ಸಮುದ್ರದ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿಯುವ ಹಿನ್ನೆಲೆಯಲ್ಲಿ ಮೇ 16ರಂದು ಕರ್ನಾಟಕಕ್ಕೆ ಚಂಡಮಾರುತ ಅಪ್ಪಳಿಸಲಿದೆ. ತೌಕ್ತೆ ಚಂಡಮಾರುತ ಎಂಬುದು ಮಯನ್ಮಾರ್ ಹೆಸರಾಗಿದೆ. ಲಕ್ಷದ್ವೀಪ, ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರದ ಕರಾವಳಿ ಭಾಗದಲ್ಲಿ ತೌಕ್ತೆ ಚಂಡಮಾರುತದ ಅಬ್ಬರ ಹೆಚ್ಚಾಗಿರಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗದ ಕೆಲವು ಭಾಗಗಳಲ್ಲಿ ಇಂದು ಮತ್ತು ಮೇ 17ರಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಮತ್ತು ಮೇ 16ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ,ಕೊಪ್ಪಳ, ವಿಜಯಪುರ ಹಾಗೂ ಬಾಗಲಕೋಟೆಯ ಕೆಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

ಇಂದು ಮತ್ತು ಮೇ 16ರಂದು ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ , ಚಿಕ್ಕಮಗಳೂರು, ಹಾಸನ, ಹಾಗೂ ಕೊಡಗು ಜಿಲ್ಲೆಗಳ ಕೆಲವು ಕಡೆ ಇಂದು ಮತ್ತು 17ರಂದು ಭಾರೀ ಮಳೆಯಾಗುವ ಸಾಧ್ಯತೆ‌. ಇಂದು ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ ತುರ್ತು ಸಂದರ್ಭದಲ್ಲಿ ಕಾರ್ಯೋನ್ಮುಖಗೊಳ್ಳಲು ಕಂಟ್ರೋಲ್ ರೂಂ ತೆರೆದಿದೆ. ನೆರವಿನ ಅಗತ್ಯವಿದ್ದರೆ ಜನರು 1077 ಅಥವಾ 0820-2574802 ಸಂಖ್ಯೆಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮನವಿ ಮಾಡಿದ್ದಾರೆ. ಕರಾವಳಿ ಭಾಗದ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

error: Content is protected !! Not allowed copy content from janadhvani.com