ನವದೆಹಲಿ:-ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಮುಂದಿನ ಜುಲೈ 31 ರೊಳಗೆ ಒಂದು ರಾಷ್ಟ್ರ ಒಂದು ಪಡಿತರ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ತೀರ್ಪು ನೀಡಿರುವ ಸುಪ್ರೀಂಕೋರ್ಟ್ ಕೊರೊನಾ ಪರಿಸ್ಥಿತಿ ಮುಂದುವರೆದಿರುವ ಹಿನ್ನಲೆಯಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಆಹಾರ ಧಾನ್ಯ ವಿತರಣೆಯನ್ನು ಮುಂದುವರೆಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.
ಕೊರೊನಾ ಎರಡನೆ ಅಲೆ ಭೀಕರತೆ ನಂತರ ವಲಸೆ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿರುವ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆಹಾರ ಭದ್ರತೆ ನೀಡುವುದರ ಜತೆಗೆ ಹಣಕಾಸು ನೆರವು ನೀಡಲು ಮುಂದಾಗಲೂ ಸೂಚಿಸುವಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಶೋಕ್‍ಭೂಷಣ್ ಹಾಗೂ ಎಂ.ಆರ್.ಷಾ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.
ಕೂಲಿಗಾಗಿ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಗಳಿಗೆ ವಲಸೆ ಹೋಗುವ ಕಾರ್ಮಿಕರಿಗೆ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ ಸಹಕಾರಿಯಾಗಿರುವುದರಿಂದ ಜು.31ರೊಳಗೆ ಆ ನೀತಿಯನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದೆ.
ಕೊರೊನಾ ಸೋಂಕಿನಿಂದ ಕಂಗೆಟ್ಟಿರುವ ವಲಸೆ ಕಾರ್ಮಿಕರಿಗೆ ಸಮುದಾಯ ಆಡುಗೆ ಮನೆ ನಿರ್ಮಾಣ ಮಾಡಿ ಉಚಿತ ಆಹಾರ ಒದಗಿಸುವಂತೆಯೂ ನ್ಯಾಯಾಲಯ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಕೊರೊನಾ ಸಂಕಷ್ಟ ಕೊನೆಗಾಣುವವರೆಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅವಶ್ಯಕತೆ ಇರುವ ಆಹಾರಧಾನ್ಯ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದೆ.