ಹೊಸದಿಲ್ಲಿ: ಎನ್‌ಡಿಎ ಮಿತ್ರಪಕ್ಷ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ನಾಯಕಿ ಅಗಾಥಾ ಸಂಗ್ಮಾ ಅವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಎನ್‌ಡಿಎ ಮಿತ್ರಪಕ್ಷಗಳ ಸಭೆಯಲ್ಲಿ ಸಂಗ್ಮಾ ಈ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.
ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆಯೇ ಈಶಾನ್ಯ ರಾಜ್ಯಗಳಲ್ಲಿ ಸಾರ್ವಜನಿಕ ಭಾವನೆಗಳನ್ನು ಗೌರವಿಸಿ ಸಿಎಎ ಹಿಂಪಡೆಯಲು ಒತ್ತಾಯಿಸಿದ್ದೇನೆ ಎಂದು ಅಗಾಥಾ ಸಂಗ್ಮಾ ಸುದ್ದಿ ಸಂಸ್ಥೆಗೆ ತಿಳಿಸಿದರು. ಸರ್ಕಾರದ ಪ್ರತಿಕ್ರಿಯೆ ಏನು ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು. ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.
ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪಸ್ಥಿತರಿದ್ದರು. ಅಗಾಥಾ ಸಂಗ್ಮಾ ಅವರು ಮೇಘಾಲಯದ ತುರಾ ಕ್ಷೇತ್ರದ ಸಂಸದರಾಗಿದ್ದಾರೆ.