ಮಂಗಳೂರು, ನವೆಂಬರ್ 14: ಬಹು ವಿವಾದಕ್ಕೊಳಗಾದ ನಗರದ ಹೊರ ವಲಯದ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರವನ್ನು ಕೇಂದ್ರ ಸರಕಾರ ರದ್ದುಗೊಳಿಸಿದೆ. ಈ ವಿಚಾರವನ್ನು ದಕ್ಷಿಣ ಸಂಸದ ಹಾಗೂ ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಸೋಮವಾರ ಟ್ವೀಟ್ ಮಾಡಿರುವ ಕಟೀಲ್,” ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದೆ, ನಮ್ಮ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ನಾಗರಿಕರ ಪರವಾಗಿ ಧನ್ಯವಾದಗಳು” ಎಂದು ಹೇಳಿದ್ದಾರೆ.
ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶಗಳನ್ನು ಪೂರೈಸಲಾಗಿದೆ ಎಂದು ಟ್ವೀಟ್‌ನಲ್ಲಿ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ವಿಧಾನ ಸಭೆ ಅಧಿವೇಶನದಲ್ಲಿ ಧ್ವನಿ ಎತ್ತಿದ್ದ ಯು.ಟಿ.ಖಾದರ್
ರಾಷ್ಟ್ರೀಯ ಹೆದ್ದಾರಿ 66 (NH-66) ಸುರತ್ಕಲ್ ನಲ್ಲಿರುವ ಅವೈಜ್ಞಾನಿಕ, ಅನಧಿಕೃತ ಟೋಲ್ ಅನ್ನು ತೆರವು ಗೊಳಿಸುವಂತೆ ಕರ್ನಾಟಕದ ಸರಕಾರದ ವಿರೋಧ ಪಕ್ಷ ಉಪ ನಾಯಕರಾದ ಶ್ರೀ ಯು.ಟಿ. ಕಾದರ್ (U.T.Khader) ರವರು ಅಧಿವೇಶನದಲ್ಲಿ ಧ್ವನಿ ಎತ್ತಿದ್ದರ ಫಲವಾಗಿ, ಸರಕಾರವು ಅಧಿಕೃತವಾಗಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ರದ್ದತಿ ಬಗ್ಗೆ ನಿರ್ಣಯ ಕೈಗೊಂಡಿರುವುದನ್ನು ಬಹಿರಂಗ ಪಡಿಸಿತ್ತು.ಈ ನಿಟ್ಟಿನಲ್ಲಿ, ಸಾರ್ವಜನಿಕರ ಬಹು ಕಾಲದ ಅಪೇಕ್ಷೆಗೆ ಸ್ಪಂದಿಸಿ, ಶ್ರೀ ಯು.ಟಿ.ಖಾದರ್ ಅವರು ಸರಕಾರದ ಸ್ಪಷ್ಟ ನಿಲುವು ಬಯಸಿ ಧ್ವನಿ ಎತ್ತಿರುವುದಕ್ಕೆ ಸಾರ್ವಜನಿಕರ ಅಭಿನಂದನೆಗೆ ಪಾತ್ರರಾಗಿದ್ದರು.
ಆದರೆ, ಮತ್ತೆ ಟೋಲ್ ಸಂಗ್ರಹ ಮುಂದುವರಿದಿತ್ತು. ಅಕ್ರಮವಾಗಿ ಕಾರ್ಯಾಚರಿಸುತ್ತಿರುವ ಸುರತ್ಕಲ್ ಟೋಲ್ ಗೇಟ್ ತೆರವು ಮಾಡಬೇಕೆಂದು ಟೋಲ್ ವಿರೋಧಿ ಸಮಿತಿ ಇತ್ತೀಚೆಗೆ ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿತ್ತು. ಆ ಬಳಿಕವೂ ಟೋಲ್ ತೆರವು ಮಾಡಿರದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಅನಿರ್ದಿಷ್ಟವಾಧಿ ಹಗಲು ರಾತ್ರಿ ಧರಣಿ ನಡೆಸುತ್ತಿತ್ತು.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ 2015ರಲ್ಲಿ ಈ ವಿವಾದಿತ ಟೋಲ್‌ಗೇಟ್ ತೆರೆಯಲಾಗಿದೆ. ಇದು ನಿಯಮ ಬಾಹಿರವಾಗಿದೆ ಎಂಬ ಆರೋಪ ಸಾಕಷ್ಟು ದಿನಗಳಿಂದ ಕೇಳಿಬರುತ್ತಿತ್ತು. ಕೇವಲ 17 ಕಿಮೀ ಅಂತರದಲ್ಲಿ ಎರಡು ಟೋಲ್‌ಗೇಟ್ ಇದ್ದಿದ್ದರಿಂದ ಟೋಲ್ ವಿರೋಧಿ ಸಮಿತಿ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮದ ಅನ್ವಯ ಹೆದ್ದಾರಿಯಲ್ಲಿ ಎರಡು ಟೋಲ್‌ಗಳ ಮಧ್ಯೆ 60 ಕಿಮೀ ಅಂತರ ಇರಬೇಕು ಎಂಬ ನಿಯಮವಿದೆ. ಆದ್ದರಿಂದ ಸುರತ್ಕಲ್ ಟೋಲ್ ತೆರವು ಮಾಡಬೇಕೆಂಬುದು ದಕ್ಷಿಣ ಕನ್ನಡ ಜಿಲ್ಲೆಯ ಜನರ ಆಗ್ರಹವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 48 ಕಿಲೋ ಮೀಟರ್ ಅಂತರದಲ್ಲಿ 4 ಟೋಲ್‌ಗೇಟ್‌ಗಳಿದ್ದವು. ಅದರಲ್ಲೂ ಸುರತ್ಕಲ್ ಟೋಲ್‌ಗೇಟ್ ಅಕ್ರಮ ಎಂಬುದು ಟೋಲ್ ವಿರೋಧಿ ಹೋರಾಟಗಾರರ ಆರೋಪವಾಗಿತ್ತು.
ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್‌ನ ಎನ್.ಐ.ಟಿ.ಕೆ ಬಳಿ ಕಾರ್ಯಾಚರಣೆ ನಡೆಸುತ್ತಿರುವ ಟೋಲ್ ಗೇಟ್, ಹೆಜಮಾಡಿ ಟೋಲ್ ಗೇಟ್ ಆರಂಭವಾದ ಬಳಿಕ ಮುಚ್ಚುವ ಒಪ್ಪಂದದೊಂದಿಗೆ 6 ವರ್ಷದ ಹಿಂದೆ ತಾತ್ಕಾಲಿಕ ನೆಲೆಯಲ್ಲಿ ಆರಂಭಗೊಂಡಿತ್ತು. ಆದರೆ ತಾತ್ಕಾಲಿಕ ನೆಲೆಯಲ್ಲಿ ಆರಂಭವಾದ ಟೋಲ್ ಗೇಟ್ ಇನ್ನೂ ಕೂಡಾ ಕಾರ್ಯಾಚರಿಸುತ್ತಿರುವುದು, ಸುರತ್ಕಲ್ ಟೋಲ್ ವಿರೋಧಿ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿತ್ತು.
ಬೃಹತ್ ಪ್ರತಿಭಟನೆ ನಡೆದಿತ್ತು; ಅಕ್ಟೋಬರ್ 18ರಂದು ಸುರತ್ಕಲ್ ಟೋಲ್ ತೆರವುಗೊಳಿಸಲು ಪ್ರತಿಭಟನೆ ನಡೆಸಿದ್ದರು. ಅಂದು ಪ್ರತಿಭಟನಾಕಾರರು ಕೋಪದಲ್ಲಿ ಟೋಲ್ ವಸ್ತುಗಳನ್ನೆಲ್ಲಾ ಒಡೆದಿದ್ದರು. ಪೊಲೀಸರು ಸುಮಾರು 360ಕ್ಕೂ ಹೆಚ್ಚಿನ ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡಿದ್ದರು.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಮಸ್ತ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಆರು ವರ್ಷಗಳ ಸತತ ಹೋರಾಟದ ನಂತರ ಸುರತ್ಕಲ್ ಟೋಲ್ ಗೇಟ್ ಮುಚ್ಚಲು ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ. ಇದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಮಸ್ಥ ಜನತೆಯ ಒಗ್ಗಟ್ಟಿನ ಹೋರಾಟದ ಫಲ. ಜನತೆಯ ಅಖಂಡ ಬೆಂಬಲದೊಂದಿಗೆ ಹೋರಾಟ ಸಮಿತಿ ಕಳೆದ ಮೂರು ತಿಂಗಳಿಂದ ನಿರ್ಣಾಯಕ ಹೋರಾಟಗಳನ್ನು ಸಂಘಟಿಸಿತ್ತು. ಅಂತಹ ದಣಿವರಿಯದ ಪ್ರಯತ್ನಗಳು ಇಂದು ಗೆಲುವಿನ ಸನಿಹಕ್ಕೆ ತಲುಪಿಸಿದೆ.
ಹಗಲು ರಾತ್ರಿ ಧರಣಿ ನಿರತವಾಗಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಗೆ ಟೋಲ್ ಗೇಟ್ ತೆರವು ಕುರಿತು ಈವರೆಗೂ ಜಿಲ್ಲಾಡಳಿತದ ಕಡೆಯಿಂದ ಯಾವುದೆ ಅಧಿಕೃತ ಮಾಹಿತಿ ಬಂದಿಲ್ಲ. ಅಧಿಕೃತ ಮಾಹಿತಿ, ಟೋಲ್ ಗೇಟ್ ನಲ್ಲಿ ಸಂಗ್ರಹ ನಿಲ್ಲುವವರೆಗೂ ಧರಣಿ ಮುಂದುವರಿಯಲಿದೆ. ಟೋಲ್ ಸಂಗ್ರಹ ಸ್ಥಗಿತಗೊಂಡ ತರುವಾಯವಷ್ಟೆ ಧರಣಿ ಸ್ಥಗಿತಗೊಳ್ಳಲಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ