janadhvani

Kannada Online News Paper

ಕೊನೆಗೂ ಬಹು ನಿರೀಕ್ಷಿತ ‘ಜಾತಿ ಗಣತಿ’ ವರದಿ ಸಲ್ಲಿಕೆ- ಸಂಜೆ ಸಂಪುಟ ಸಭೆಯಲ್ಲಿ ಚರ್ಚೆ

ಸಂಪುಟದಲ್ಲಿ ಒಪ್ಪಿಗೆ ಪಡೆದ ನಂತರ ಜಾರಿ ಕುರಿತು ತೀರ್ಮಾನಿಸಲಾಗುವುದು ಎಂದು ವರದಿ ಸ್ವೀಕರಿಸಿದ ಬಳಿಕ ಸುದ್ದಿಗಾರರಿಗೆ ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: 2014-15ನೇ ಸಾಲಿನ ಬಹು ನಿರೀಕ್ಷಿತ ಕರ್ನಾಟಕ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ವರದಿ (ಜಾತಿ ಗಣತಿ) ಸಲ್ಲಿಕೆಯಾಗಿದೆ. ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್‌ ಹೆಗ್ಡೆ ಅವರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.

ಇದೇ ವೇಳೆ ಮಾತನಾಡಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಅವರು 2014ರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಎಚ್‌.ಕಾಂತರಾಜು ಅವರು ಜಾತಿ ಗಣತಿ ಕೈಗೊಂಡರು. ಪರಿಶಿಷ್ಟ ಜಾತಿ ಹಾಗೂ ಪಂಗಡದವರನ್ನು ಹೊರತುಪಡಿಸಿ ಇತರೆ ವರ್ಗಗಳ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಕಾಂತರಾಜು ಅವರು ಕಾರಣಾಂತರಗಳಿಂದ ವರದಿಯನ್ನು ಸಲ್ಲಿಸಲು ಆಗಲಿಲ್ಲ. ಮೂರು ವರ್ಷದಿಂದ ಇದನ್ನು ಅಂತಿಮಗೊಳಿಸಿ ಈಗ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲಾಗಿದೆ ಎಂದು ಹೇಳಿದರು.

ವರದಿಯಲ್ಲಿ ಏನಿದೆ ಎನ್ನುವುದನ್ನು ನಾವು ತಿಳಿಸಲು ಆಗುವುದಿಲ್ಲ. ವರದಿಯನ್ನು ಸಂಪುಟದ ಮುಂದೆ ಇಟ್ಟ ನಂತರ ಅಲ್ಲಿ ಅನುಮತಿ ಪಡೆದು ಬಳಿಕ ವರದಿ ಜಾರಿ ಕುರಿತು ತೀರ್ಮಾನಿಸಲಾಗುತ್ತದೆ ಎಂದು ತಿಳಿಸಿದರು.

ಸಿಎಂ ಹೇಳಿದ್ದೇನು?
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್‌ ಹೆಗ್ಡೆ ಹಾಗೂ ಇತರ ಸದಸ್ಯರು ಕರ್ನಾಟಕ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ವರದಿ (ಜಾತಿ ಗಣತಿ) ಯನ್ನು ಸಲ್ಲಿಸಿದ್ದಾರೆ. ವರದಿಯಲ್ಲಿ ಏನಿದೆ ಎನ್ನುವುದು ಗೊತ್ತಿಲ್ಲ. ಇದನ್ನು ಹಿಂದುಳಿದ ವರ್ಗಗಳ ಇಲಾಖೆಗೆ ನೀಡಲಾಗಿದೆ. ವರದಿಯನ್ನು ಸಚಿವ ಸಂಪುಟದ ಮುಂದೆ ಇಡಬೇಕಾಗುತ್ತದೆ. ಸಂಪುಟದಲ್ಲಿ ಒಪ್ಪಿಗೆ ಪಡೆದ ನಂತರ ಜಾರಿ ಕುರಿತು ತೀರ್ಮಾನಿಸಲಾಗುವುದು ಎಂದು ವರದಿ ಸ್ವೀಕರಿಸಿದ ಬಳಿಕ ಸುದ್ದಿಗಾರರಿಗೆ ಸಿಎಂ ಸಿದ್ದರಾಮಯ್ಯ ಹೇಳಿದರು.

ಸಂಜೆ ಸಂಪುಟ ಸಭೆ
ಗುರುವಾರ ಸಂಜೆ ಸಂಪುಟ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ವರದಿ ಕುರಿತ ಮುಂದಿನ ಕ್ರಮದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಬಹುತೇಕ ವರದಿಯ ಅಧ್ಯಯನಕ್ಕೆ ಸಂಪುಟ ಉಪ ಸಮಿತಿ ನೇಮಕ ಮಾಡಲು ನಿರ್ಧಾರವನ್ನು ಸಂಪುಟ ಸಭೆಯಲ್ಲಿ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ.

ಸುಮಾರು 158 ಕೋಟಿ ರೂ. ವೆಚ್ಚದಲ್ಲಿ ತಯಾರಿಸಲಾಗಿದ್ದ ವರದಿ ಕಳೆದ ಏಳೆಂಟು ವರ್ಷಗಳಿಂದ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ವರದಿಯ ಪರ ಮತ್ತು ವಿರುದ್ಧ ಹಲವು ರಾಜಕೀಯ ಪಕ್ಷಗಳು ಮತ್ತು ನಾಯಕರು ವಾಗ್ವಾದ ನಡೆಸಿದ್ದರು. ಅದೇ ಹೊತ್ತಿಗೆ, ಲಿಂಗಾಯತ ಮತ್ತು ಒಕ್ಕಲಿಗ ಮತ್ತಿತರ ಕೆಲವು ಪ್ರಬಲ ಸಮುದಾಯಗಳು ವರದಿ ಸ್ವೀಕರಿಸದಂತೆ ಸರ್ಕಾರವನ್ನು ಒತ್ತಾಯಿಸಿ ಹೋರಾಟ ನಡೆಸಿದ್ದವು.

ಹಾಗೇ ಸಾಕಷ್ಟು ಅತಿ ಹಿಂದುಳಿದ ಸಮುದಾಯಗಳ ಒಕ್ಕೂಟದಂತಹ ಹಲವು ಸಂಘಟನೆಗಳು ವರದಿ ಸ್ವೀಕರಿಸಿ ಜಾರಿ ಮಾಡುವಂತೆ ಆಗ್ರಹಿಸಿ ಹೋರಾಟವನ್ನೂ ನಡೆಸಿದ್ದವು. ಅಲ್ಲದೆ, ವರದಿ ಅಧಿಕೃತವಾಗಿ ಸ್ವೀಕೃತವಾಗಿ ಅದರ ಶಿಫಾರಸುಗಳು ಜಾರಿಯಾದಲ್ಲಿ ರಾಜ್ಯದ ರಾಜಕೀಯ ಮೀಸಲಾತಿ ಮತ್ತು ಅನುದಾನ ಹಂಚಿಕೆಯಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಲಿದೆ ಎಂಬ ಮಾತುಗಳೂ ಕೇಳಿಬಂದಿದ್ದವು.

ಇತ್ತೀಚೆಗೆ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಎಸ್‌ವೈಎಸ್ ಇದರ 30 ನೇ ವರ್ಷಾಚರಣೆಯ ಸಮಾರೋಪ ಸಮಾರಂಭದಲ್ಲಿ ಸನ್ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮಂಡಿಸಲಾದ ಠರಾವಿನಲ್ಲಿ ಜಾತಿ ಗಣತಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಲಾಗಿತ್ತು.

error: Content is protected !! Not allowed copy content from janadhvani.com