janadhvani

Kannada Online News Paper

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಇಕ್ಬಾಲ್ ಬಾಳಿಲರಿಗೆ SKSSF ರಾಜ್ಯ ಸಮಿತಿಯಿಂದ ಸನ್ಮಾನ

ಮಂಗಳೂರು: 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ SKSSF ಕರ್ನಾಟಕ ರಾಜ್ಯ ಉಪಾಧ್ಯಕ್ಷ ಇಕ್ಬಾಲ್ ಬಾಳಿಲ ಅವರನ್ನು SKSSF ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಮಾದಕ ಮುಕ್ತ ಸಮಾಜ ನಿರ್ಮಾಣ, ಸೌಹಾರ್ದತೆಯ ಪ್ರಚಾರ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಗಮನಾರ್ಹ ಕೊಡುಗೆಯನ್ನು ಗುರುತಿಸಿ ಇಕ್ಬಾಲ್ ಬಾಳಿಲ ಅವರಿಗೆ ಈ ಪ್ರಶಸ್ತಿ ಲಭಿಸಿರುವುದು ಸಂಘಟನೆಯ ಪಾಲಿಗೆ ಹೆಮ್ಮೆಯ ಹಾಗೂ ಸಂತಸದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸಮಿತಿಯು ಸ್ಮರಣಿಕೆಯನ್ನು ನೀಡಿ ಗೌರವಿಸುವ ಮೂಲಕ ಅವರ ಸಾಧನೆಯನ್ನು ಅಭಿನಂದಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ SKSSF ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಸ್ ಕೌಸರಿ, “ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡುತ್ತಾ, SKSSF ಸಂಘಟನೆಯಲ್ಲಿ ಅತ್ಯಂತ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ಇಕ್ಬಾಲ್ ಬಾಳಿಲ ಅವರು ರಾಜ್ಯಾದ್ಯಂತ ಮಾದಕ ಮುಕ್ತ ಸಮಾಜದ ಪರವಾಗಿ ಬೃಹತ್ ಜಾಗೃತಿ ಅಭಿಯಾನವನ್ನು ಮುನ್ನಡೆಸಿದ್ದಾರೆ. ವಿವಿಧ ಜಾಗೃತಿ ಕಾರ್ಯಕ್ರಮಗಳು, ತರಬೇತಿ ಶಿಬಿರಗಳು ಹಾಗೂ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಯುವಜನರಲ್ಲಿ ಹೊಸ ಚೈತನ್ಯ ಮೂಡಿಸುವುದರ ಜೊತೆಗೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯದಲ್ಲಿಯೂ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ಈ ನಿರಂತರ ಸಮಾಜಮುಖಿ ಸೇವೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ನಿಜಕ್ಕೂ ಅಭಿನಂದನಾರ್ಹ. ಇಂತಹ ಸೇವೆಯನ್ನು ಗುರುತಿಸಿ ಗೌರವಿಸಿದ ಕರ್ನಾಟಕ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ SKSSF ವತಿಯಿಂದ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ SKSSF ಕರ್ನಾಟಕ ರಾಜ್ಯಾಧ್ಯಕ್ಷ ರಫೀಕ್ ಹುದವಿ ಕೊಳಾರಿ, ಸಯ್ಯಿದ್ ಅಮೀರ್ ತಂಙಳ್ ಕಿನ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಸ್ ಕೌಸರಿ, ಕೋಶಾಧಿಕಾರಿ ತಮ್ಲೀಕ್ ದಾರಿಮಿ ಕೊಡಗು, ವರ್ಕಿಂಗ್ ಕಾರ್ಯದರ್ಶಿ ತಾಜುದ್ದೀನ್ ರಹ್ಮಾನಿ, SKSSF ಕೇಂದ್ರ ಸಮಿತಿ ಕಾರ್ಯದರ್ಶಿ ಕಾಸಿಂ ದಾರಿಮಿ ಸೇರಿದಂತೆ ರಾಜ್ಯ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿರಿ...