ಬೆಂಗಳೂರು(ಫೆ.21): 2019ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ.ಪರೀಕ್ಷಾ ಕೇಂದ್ರಕ್ಕೆ ಹೋಗಲು ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆಯೇ ಉಚಿತ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಿದೆ.
ಕೇವಲ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ರಾಜ್ಯದ ಎಲ್ಲಾ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ಅವಕಾಶವಿರುತ್ತದೆ ಎಂದು ಖುದ್ದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರೇ ತಿಳಿಸಿದ್ದಾರೆ.
ಮುಂದಿನ ತಿಂಗಳು ಮಾರ್ಚ್ 1ಕ್ಕೆ ಆರಂಭವಾಗಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.18 ವರೆಗೂ ನಡೆಯಲಿದೆ. ಪರೀಕ್ಷೆ ಹಿನ್ನೆಲೆಯಲ್ಲಿ ಪ್ರಶ್ನೆ ಪತ್ರಿಗಳ ಅವಾಂತರಗಳ ಬಗ್ಗೆ ಎಚ್ಚೆತ್ತುಕೊಂಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಶೇ.100 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದೆ. ಈ ಮೂಲಕ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದು, ಎಲ್ಲಾ ರೀತಿಯ ಸಿದ್ದತೆಗಳನ್ನು ನಡೆಸಿದೆ.
ಪರೀಕ್ಷೆಯು ಬೆಳಗ್ಗೆ 10.15ರಿಂದ 1.30ರವರೆಗೆ ನಡೆಯಲಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ 10.15 ರೊಳಗೆ ಪರೀಕ್ಷಾ ಕೇಂದ್ರದಲ್ಲಿರುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯದಲ್ಲಿ ಒಟ್ಟು 1004 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ.