janadhvani

Kannada Online News Paper

ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಲಿ- ರಾಜ್ಯ ಕಾಂಗ್ರೆಸ್ ನಾಯಕರ ಆಗ್ರಹ

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಆಹ್ವಾನ ನೀಡಿದ್ದಾರೆ.

“ಕರ್ನಾಟಕ ಯಾವಾಗಲು ಕಾಂಗ್ರೆಸ್ ನಾಯಕರಿಗೆ ಬೆಂಬಲ ಮತ್ತು ಪ್ರೋತ್ಸಾಹ ನೀಡುತ್ತಾ ಬಂದಿದೆ. ಅದು ಶ್ರೀಮತಿ ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿ ಪ್ರಕರಣದಲ್ಲಿ ಸಾಬೀತಾಗಿದೆ. ನಮ್ಮ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಸ್ಪರ್ಧೆ ಮಾಡಬೇಕು ಎಂಬುದು ನಮ್ಮೆಲ್ಲರ ಬಯಕೆ,” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಕೂಡ ರಾಹುಲ್ ಗಾಂಧಿ ಉತ್ತರ ಭಾರತ ಮತ್ತು ದಕ್ಷಿಣ ಕರ್ನಾಟಕ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಿ ಎಂದು ಮನವಿ ಮಾಡಿ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಈ ಹಿಂದೆ ಚಿಕ್ಕಮಗಳೂರಿನಿಂದ ಇಂದಿರಾ ಗಾಂಧಿ ಕೂಡ ಸ್ಪರ್ಧಿಸಿ ಗೆದ್ದಿದ್ದಾರೆ. ರಾಹುಲ್ ಗಾಂಧಿ ಇಲ್ಲಿಂದ ಸ್ಪರ್ಧೆ ಮಾಡ ಬಯಸಿದರೆ, ನಾವು ಸ್ವಾಗತಿಸುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಇಂದು ಹೇಳಿದ್ದಾರೆ.

ಇಂದಿರಾ ಗಾಂಧಿ ಅವರು ಚಿಕ್ಕಮಗಳೂರು ಕ್ಷೇತ್ರದಿಂದ ಮತ್ತು ಸೋನಿಯಾ ಗಾಂಧಿ ಅವರು ಬಳ್ಳಾರಿಯಿಂದ ಲೋಕಸಭೆಗೆ ಆಯ್ಕೆಯಾಗುವ ಮೂಲಕ ರಾಜಕೀಯವಾಗಿ ಮರುಜನ್ಮ ಪಡೆದ ಐತಿಹಾಸಿಕ ಉದಾಹರಣೆಗೆ ಕರ್ನಾಟಕ ಸಾಕ್ಷಿಯಾಗಿದೆ.

ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೂಡ ಕರ್ನಾಟಕದಿಂದ ಸ್ಪರ್ಧಿಸಿದರೆ ರಾಜಕೀಯವಾಗಿ ಹೆಚ್ಚಿನ ಶಕ್ತಿ ಪಡೆಯಬಹುದು. ಈ ಹಿನ್ನೆಲೆಯಲ್ಲಿ ರಾಹುಲ್ ಕರ್ನಾಟಕದಿಂದ ಲೋಕಸಭೆಗೆ ಸ್ಪರ್ಧಿಸಲಿ ಎಂಬುದು ರಾಜ್ಯ ನಾಯಕರ ಕಳಕಳಿಯಾಗಿದೆ.

error: Content is protected !! Not allowed copy content from janadhvani.com