janadhvani

Kannada Online News Paper

ಪ್ರಧಾನಿ ಮಂಗಳೂರಿಗೆ ಆಗಮಿಸುವ ಹಿನ್ನಲೆ-ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಮಂಗಳೂರು : ಲೋಕಸಭಾ ಚುನಾವಣೆಯ ಪ್ರಚಾರದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಎ.13ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ನಗರಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಜೊತೆಗೆ ವಾಹನ ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಐವರು ಎಸ್ಪಿ/ಡಿಸಿಪಿ, 10 ಡಿವೈಎಸ್ಪಿ/ಎಸಿಪಿ, 36 ಪೊಲೀಸ್ ಇನ್‌ಸ್ಪೆಕ್ಟರ್, 67 ಪಿಎಸ್ಸೈ, 147 ಎಎಸ್ಸೈ, 1,207 ಹೆಡ್ ಕಾನ್‌ಸ್ಟೇಬಲ್/ಪಿ.ಸಿ. ಸೇರಿದಂತೆ ಒಟ್ಟು 1472 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಬಂದೋಬಸ್ತ್‌ಗಾಗಿ ನಿಯೋಜಿಸಲಾಗಿದೆ. ಇದಲ್ಲದೆ 92 ಎಚ್.ಜಿ., 5 ಕೆಎಸ್.ಆರ್.ಪಿ. ತುಕಡಿ, 19 ಸಿ.ಎ.ಆರ್ ತುಕಡಿ ಹಾಗೂ 2 ಸಿ.ಆರ್.ಪಿ.ಎಫ್. ತುಕಡಿಗಳ ಅಧಿಕಾರಿ ಮತ್ತು ಸಿಬ್ಬಂದಿ ಅಂದು ಕರ್ತವ್ಯದಲ್ಲಿರುವರು. ಕಾರ್ಯಕ್ರಮ ನಡೆಯುವ ಸ್ಥಳ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಪ್ರಧಾನಿ ಸಂಚರಿಸುವ ಸ್ಥಳಗಳ ತಪಾಸಣೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ಆಯುಕ್ತರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮ ನಡೆಯುವ ನೆಹರೂ ಮೈದಾನದಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ನಗರದ ಹೋಟೆಲ್/ಲಾಡ್ಜ್‌ಗಳಲ್ಲಿ ತಪಾಸಣೆ ನಡೆಸಿ ಸಂಶಯಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗುತ್ತಿದೆ. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ನಗರದ ಪ್ರಮುಖ ಸ್ಥಳಗಳಲ್ಲಿ ತೀವ್ರ ತಪಾಸಣೆ ಮತ್ತು ನಿಗಾ ವಹಿಸಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ವಾಹನ ಸಂಚಾರ, ಪಾರ್ಕಿಂಗ್ ವ್ಯವಸ್ಥೆಯಲ್ಲಿ ಬದಲಾವಣೆ
ಎ.13ರಂದು ಬೆಳಗ್ಗೆ 8ರಿಂದ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ನಿರ್ಗಮಿಸುವ ವರೆಗೆ ಬಜ್ಪೆ ವಿಮಾನ ನಿಲ್ದಾಣದಿಂದ ನಗರದ ನೆಹರೂ ಮೈದಾನದ ವರೆಗೆ ರಸ್ತೆಯ ಎರಡೂ ಕಡೆಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

error: Content is protected !! Not allowed copy content from janadhvani.com