ನವದೆಹಲಿ: ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಇತ್ಯರ್ಥ ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಚುನಾವಣೆ ಆಯೋಗಕ್ಕೆ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
‘ಮತಗಳ ಧ್ರುವೀಕರಣಕ್ಕಾಗಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಬಿಜೆಪಿ ಸಮಾವೇಶಗಳಲ್ಲಿ ಧ್ವೇಷ ಭಾಷಣ ಮಾಡಿದ್ದಾರೆ. ಪ್ರಚಾರದ ವೇಳೆ ಸೇನೆಯ ವಿಚಾರಗಳನ್ನೂ ಪ್ರಸ್ತಾಪಿಸಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ. ಈ ಕುರಿತು ಚುನಾವಣೆ ಆಯೋಗಕ್ಕೆ ದಾಖಲಾಗಿರುವ ಪ್ರಕರಣ ಸಂಬಂಧ ಇನ್ನು 24 ಗಂಟೆಗಳಲ್ಲಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕಾಂಗ್ರೆಸ್ ಸಂಸದೆ ಸುಷ್ಮಿತಾ ದೇವ್ ಅವರು ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.
ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠವು ಮಂಗಳವಾರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಪ್ರಕರಣದ ವಿಚಾರಣೆಯನ್ನು ಮೇ.2ಕ್ಕೆ ಮುಂದೂಡಿದೆ.