ನವದೆಹಲಿ(ಮೇ.02): ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ದಾಖಲಾಗಿರುವ ಒಂಬತ್ತು ಪ್ರಕರಣಗಳನ್ನು ಕೂಡಲೇ ಇತ್ಯರ್ಥಗೊಳಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ. ಕಾಂಗ್ರೆಸ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ ಮೇ.6 ರೊಳಗೆ ಇತ್ಯರ್ಥಗೊಳಿಸುವಂತೆ ಆದೇಶ ಹೊರಡಿಸಿದೆ.
ಲೋಕಸಭಾ ಚುನಾವಣೆ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ್ಧಾರೆ ಎಂದು ಆರೋಪಿಸಿ ಪ್ರಧಾನಿ ಮೋದಿ ಸೇರಿದಂತೆ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿತ್ತು. ಅಲ್ಲದೇ ಕೂಡಲೇ ಇಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಕಾಂಗ್ರೆಸ್ ಆಗ್ರಹಿಸಿತ್ತು.
ನಾವು ಮೋದಿ ಮತ್ತು ಅಮಿತ್ ಶಾ ಅವರ ವಿರುದ್ಧ 11 ದೂರುಗಳನ್ನು ನೀಡಿದ್ದೇವೆ. ಆದರೆ, ಚುನಾವಣಾ ಆಯೋಗ ಎರಡು ಪ್ರಕರಣಗಳನ್ನು ಮಾತ್ರ ವಿಲೇವಾರಿ ಮಾಡಿದೆ. ಹಾಗಾಗಿ ಇನ್ನುಳಿದ ಒಂಬತ್ತು ಪ್ರಕರಣಗಳನ್ನು ಇತ್ಯರ್ಥಗೊಳಿಸುವಂತೆ ಆದೇಶಿಸಿ ಎಂದು ಕಾಂಗ್ರೆಸ್ ಸಂಸದೆ ಸುಷ್ಮಿತಾ ದೇವ್ ಪರವಾಗಿ ವಕೀಲ ಅಭಿಷೇಕ್ ಮನು ಸಿಂಘ್ವಿ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದರು.
ಕಾಂಗ್ರೆಸ್ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠ, ಇಬ್ಬರು ನಾಯಕರ ವಿರುದ್ಧ ದಾಖಲಾಗಿರುವ ಒಂಬತ್ತು ಪ್ರಕರಣಗಳ ಕುರಿತು ಮೇ 6 ರೊಳಗೆ ನಿರ್ಧಾರ ತೆಗೆದುಕೊಳ್ಳುವಂತೆ ಆಯೋಗಕ್ಕೆ ಸೂಚನೆ ನೀಡಿದೆ.
ಇನ್ನು ಸುಪ್ರೀಂಕೋರ್ಟ್ಗೆ ಉತ್ತರಿಸಿರುವ ಚುನಾವಣಾ ಆಯೋಗ, ಕಾಂಗ್ರೆಸ್ ದಾಖಲಿಸಿರುವ 11 ದೂರುಗಳ ಪೈಕಿ ಈಗಾಗಲೇ ಎರಡು ಪ್ರಕರಣಗಳನ್ನು ಬಗೆಹರಿಸಿದ್ದೇವೆ. ನೀವು ಸೂಚಿದಂತೆ ಮುಂದಿನ ಪ್ರಕರಣಗಳನ್ನು ಕೈಗೆತ್ತಿಕೊಳ್ಳುತ್ತೇವೆ ಎಂದು ತಿಳಿಸಿದೆ.