ನವದೆಹಲಿ: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ವಿರುದ್ಧ ನ್ಯಾಯಾಲಯದ ಮಾಜಿ ಸಿಬ್ಬಂದಿಯೊಬ್ಬರು ಮಾಡಿದ್ದ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹುರುಳಿಲ್ಲ ಎಂದು ಆಂತರಿಕ ವಿಚಾರಣಾ ಸಮಿತಿಯು ಹೇಳಿದೆ.
ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ, ಮಹಿಳಾ ನ್ಯಾಯಮೂರ್ತಿಗಳಾದ ಇಂದೂ ಮಲ್ಹೋತ್ರಾ ಹಾಗೂ ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ಪೀಠವು ಸೋಮವಾರ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿಗೆ (ಬೊಬ್ಡೆ ನಂತರದ) ವರದಿಯನ್ನು ಸಲ್ಲಿಸಿದೆ.
‘ಆಂತರಿಕ ಸಮಿತಿಯು ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದೆ. ಗೊಗೊಯಿ ವಿರುದ್ಧ ಮಹಿಳೆಯು ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂಬ ಅಭಿಪ್ರಾಯವನ್ನು ವರದಿಯಲ್ಲಿ ವ್ಯಕ್ತಪಡಿಸಲಾಗಿದೆ’ ಎಂದು ಸುಪ್ರೀಂ ಕೋರ್ಟ್‌ನ ಪ್ರಧಾನ ಕಾರ್ಯದರ್ಶಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
‘ಇಂದಿರಾ ಜೈಸಿಂಗ್ ವಿರುದ್ಧ ಸುಪ್ರೀಂ ಕೋರ್ಟ್ ಪ್ರಕರಣದಲ್ಲಿ ನೀಡಿರುವ ತೀರ್ಪಿನಲ್ಲಿ ಉಲ್ಲೇಖಿಸಿರುವ ನಿಯಮಾವಳಿಗೆ ಅನುಗುಣವಾಗಿ ಆಂತರಿಕ ಸಮಿತಿಯನ್ನು ರಚಿಸಲಾಗಿದೆ. ಅದರ ಪ್ರಕಾರ, ಕೋರ್ಟ್‌ಗೆ ಸಲ್ಲಿಸುವ ವರದಿಯನ್ನು ಬಹಿರಂಗಪಡಿಸಲು ಅವಕಾಶ ಇರುವುದಿಲ್ಲ’ ಎಂದೂ ತಿಳಿಸಲಾಗಿದೆ.