ನವದೆಹಲಿ (ಮೇ 10): ಮೇ 5ರಂದು ರೈಲು ವಿಳಂಬದಿಂದಾಗಿ ನೀಟ್ ಪರೀಕ್ಷೆ ಬರೆಯಲು ವಂಚಿತರಾಗಿದ್ದ ರಾಜ್ಯದ ವಿದ್ಯಾರ್ಥಿಗಳಿಗೆ ಇದೇ ಮೇ 20ರಂದು ಮರು ಪರೀಕ್ಷೆ ನಡೆಸಲಾಗುವುದು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವ್ಡೇಕರ್ ಟ್ವೀಟ್ ಮಾಡಿದ್ದಾರೆ.
ಕಳೆದ ಭಾನುವಾರ ಮೇ 5ರಂದು ದೇಶದ್ಯಾಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳಿಗೆ ನಡೆಯುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್) ನಡೆಸಲಾಗಿತ್ತು. ಕರ್ನಾಟಕದಲ್ಲಿ ಬೆಂಗಳೂರು, ಮಂಗಳೂರು, ಕಲಬುರಗಿ ಮತ್ತು ಬೆಳಗಾವಿ ಕೇಂದ್ರಗಳಲ್ಲಿ ಏಕಕಾಲದಲ್ಲಿ ಪರೀಕ್ಷೆ ನಡೆದಿತ್ತು.
ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಂಡಿದ್ದ ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ರೈಲು ವಿಳಂಬದಿಂದ ಈ ಪರೀಕ್ಷೆ ಬರೆಯುವಲ್ಲಿ ವಿಫಲರಾಗಿದ್ದರು. ಹಂಪಿ ಎಕ್ಸ್ಪ್ರೆಸ್ ರೈಲು ತಡವಾಗಿ ಬಂದ ಪರಿಣಾಮ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದರು. ಈ ಸಂಬಂಧ ಮತ್ತೊಂದು ಅವಕಾಶ ನೀಡುವಂತೆ ಸಿಎಂ ಕುಮಾರಸ್ವಾಮಿ ಅವರಿಗೆ ವಿದ್ಯಾರ್ಥಿಗಳು, ಪೋಷಕರು ಮನವಿ ಮಾಡಿದ್ದರು. ಈ ಸಂಬಂಧ ಸಿಎಂ ಕುಮಾರಸ್ವಾಮಿ ಕೂಡ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ನೀಡುವಂತೆ ಕೇಂದ್ರ ಸಚಿವರಿಗೆ ಪತ್ರದ ಮೂಲಕ ಮನವಿ ಮಾಡಿದ್ದರು.
ಈ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು ಮತ್ತೊಮ್ಮೆ ಅವಕಾಶ ನೀಡುವುದಾಗಿ ಭರವಸೆ ನೀಡಿದ್ದರು. ಈ ಕುರಿತು ಇಂದು ಟ್ವೀಟ್ ಮಾಡಿರುವ ಕೇಂದ್ರ ಮಾನವ ಸಂಪನ್ಮೂಲಾಭಿವೃದ್ಧಿ ಸಚಿವರು, ರೈಲು ವಿಳಂಬದಿಂದ ಪರೀಕ್ಷೆ ಬರೆಯಲು ವಂಚಿತರಾಗಿದ್ದ ಕರ್ನಾಟಕ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ.
ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಇದೇ ಮೇ 20ರಂದು ಮತ್ತೊಮ್ಮೆ ನೀಟ್ ಪರೀಕ್ಷೆ ನಡೆಸಲಾಗುವುದು. ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಟ್ವೀಟ್ ಮಾಡಿದೆ.
ವಂಚಿತ ವಿದ್ಯಾರ್ಥಿಗಳು ಈ ಹಿಂದೆ ತಮಗೆ ನಿಗದಿಸಿದ್ದ ಪರೀಕ್ಷಾ ಕೇಂದ್ರದಲ್ಲಿಯೇ ಪರೀಕ್ಷೆಯನ್ನು ಬರೆಯಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೂಡ ತಿಳಿಸಿದ್ದಾರೆ.
ಒಡಿಶಾದಲ್ಲೂ ಮೇ 20ರಂದು ಪರೀಕ್ಷೆ
ಒಡಿಶಾದಲ್ಲಿ ಫನಿ ಚಂಡಮಾರುತದಿಂದಾಗಿ ನೀಟ್ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಕರ್ನಾಟಕದ ವಿದ್ಯಾರ್ಥಿಗಳ ಜೊತೆಗೆ ಒಡಿಶಾ ವಿದ್ಯಾರ್ಥಿಗಳಿಗೂ ಮೇ 20ರಂದು ಪರೀಕ್ಷೆ ನಡೆಸಲಾಗುವುದು ಎಂದು ಕೂಡ ತಿಳಿಸಿದ್ದಾರೆ.