janadhvani

Kannada Online News Paper

ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟಿಗೆ ಪರಿಹಾರ- ಕೆ.ಸಿ. ವೇಣುಗೋಪಾಲ್ ಆಗಮನ

ಬೆಂಗಳೂರು, ಮೇ .12- ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನೋಡಿಕೊಳ್ಳುತ್ತಿರುವ ಕೆ.ಸಿ. ವೇಣುಗೋಪಾಲ್ ಹಠಾತ್ ಬೆಂಗಳೂರಿಗೆ ದೌಡಾಯಿಸಿದ್ದಾರೆ.

ಮೇ 19 ರಂದು ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ಪ್ರಚಾರ ನಡೆಸಲು ನಗರಕ್ಕೆ ಭೇಟ ನೀಡಿರುವ ವೇಣುಗೋಪಾಲ್ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ರಾಜಕೀಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕು ಎಂದು ಕೆಲ ಕಾಂಗ್ರೆಸ್ ನಾಯಕರು ಬಹಿರಂಗ ಹೇಳಿಕೆ ನೀಡುತ್ತಿರುವುದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಪೇಚಿಗೆ ಸಿಲುಕಿಸಿದೆ.

ಈ ವಿದ್ಯಮಾನಗಳ ಬೆನ್ನಲ್ಲೇ ಬೆಂಗಳೂರಿಗೆ ಆಗಮಿಸಿರುವ ವೇಣುಗೋಪಾಲ್ ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುತ್ತಾರೆಂಬ ಹೇಳಿಕೆಯನ್ನು ನೀಡದಂತೆ ಸಚಿವರು ಮತ್ತು ಶಾಸಕರಿಗೆ ಖಡಕ್ ಸಂದೇಶ ರವಾನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೈಕಮಾಂಡ್ ಸೂಚನೆಯಂತೆ ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರು ಸರ್ಕಾರವನ್ನು ಪೇಚಿಗೆ ಸಿಲುಕವಂತಹ ಹೇಳಿಕೆಯನ್ನು ನೀಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೂಲಕ ಎಚ್ಚರಿಕೆಯ ಸಂದೇಶ ನೀಡಲಿದ್ದಾರೆ. ಇದರ ಜೊತೆಗೆ ಸಮಾನ ಮನಸ್ಕರ ಸಭೆ ನಡೆಸುವುದಕ್ಕೂ ವೇಣುಗೋಪಾಲ್ ಬ್ರೇಕ್ ಹಾಕಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಉಪಚುನಾವಣೆಯ ಪ್ರಚಾರಕ್ಕೆ ವೇಣುಗೋಪಾಲ್ ಇದುವರೆಗೂ ಬಂದಿರಲಿಲ್ಲ. ಆದರೆ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪ್ರಚಾರ ನಡೆಸಲು ಬಂದಿರುವುದು ರಾಜಕೀಯ ವಲಯಗಳಲ್ಲಿ ಕುತೂಹಲ ಮೂಡಿಸಿದೆ.

error: Content is protected !! Not allowed copy content from janadhvani.com