ಬೆಂಗಳೂರು: ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ವಜಾಗೊಳಿಸಿದೆ.
ಮೇ 13ರಂದು ಈ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಆದರ್ಶಕುಮಾರ್ ಗೋಯೆಲ್ ನೇತೃತ್ವದ ಎನ್‌ಜಿಟಿಯ ಪೀಠ, ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು. ನಿನ್ನೆ ಇದರ ತೀರ್ಪು ಪ್ರಕಟಿಸಿದ್ದು, ಈ ಯೋಜನೆ ವಿರೋಧಿಸಿ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ. ಜೊತೆಗೆ ಯೋಜನೆಯ ಕಾಮಗಾರಿ ಮುಂದುವರಿಸಲು ಒಪ್ಪಿಗೆ ಸೂಚಿಸಿದೆ.
ಈ ಮೂಲಕ ಕೋಲಾರ, ಚಿಕ್ಕಬಳ್ಳಾಪುರ ಇನ್ನಿತರ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಪೂರೈಸುವ ಮಹತ್ವದ ಯೋಜನೆಗೆ ಮತ್ತೆ ಜೀವ ಬಂದಂತಾಗಿದೆ. ಈ ಯೋಜನೆಗಾಗಿ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಎಲ್ಲಾ ನಿಯಮಗಳನ್ನೂ ಉಲ್ಲಂಘನೆ ಮಾಡಲಾಗಿದೆ ಅಂತಾ ಅರ್ಜಿದಾರರು ಆರೋಪಿಸಿದ್ದರು. ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಆದ್ರೆ ಇದಕ್ಕಾಗಿ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಅಂತಾ ರಾಜ್ಯ ಸರ್ಕಾರ ತನ್ನ ವಾದ ಮಂಡಿಸಿತ್ತು.
ಇದೆಲ್ಲವನ್ನೂ ಸೂಕ್ಷ್ಮವಾಗಿ ವಿಚಾರಣೆ ನಡೆಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಅರ್ಜಿದಾರರು ಆರೋಪವನ್ನು ತಳ್ಳಿ ಹಾಕಿ ಅವರ ಅರ್ಜಿ ವಜಾಗೊಳಿಸಿದೆ. ಜೊತೆಗೆ ಕಾಮಗಾರಿ ಜಾರಿಯಲ್ಲಿರುವ ಪ್ರದೇಶದಲ್ಲಿ ಪರಿಸರ ಕಾಯ್ದೆಯ ನಿಯಮ ಉಲ್ಲಂಘನೆಯಂತಹ ಬೆಳವಣಿಗೆ ಕಂಡುಬಂದರೆ ಅಗತ್ಯ ಕ್ರಮ ಕೈಗೊಳ್ಳಬೇಕು ಅಂತಾ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಎನ್ಜಿಟಿ ಸೂಚಿಸಿದೆ.