ಬೆಂಗಳೂರು: ಸಿಎಂ ಎಚ್.ಡಿ. ಕುಮಾರಸ್ವಾಮಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಮುಂಬೈನಲ್ಲಿರುವ 10, ಬೆಂಗಳೂರಿನಲ್ಲೇ ಇರುವ ಐವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸು ಪಡೆದು, ಪ್ರತಿಪಕ್ಷಗಳ ಸಾಲಿನಲ್ಲಿ ಕೂರುವುದಾಗಿ ಹೇಳುತ್ತಿದ್ದಾರೆ. ಹೀಗಿದ್ದೂ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸಮತ ಸಾಬೀತಪಡಿಸುವುದಾಗಿ ಹೇಳುತ್ತಿದ್ದಾರೆ. ಅದು ಏನಾಗುತ್ತದೋ ನೋಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ಶಾಸಕರು ಇರುವ ರಮಡಾ ಹೋಟೆಲ್ಗೆ ತೆರಳಿ ಅವರೊಂದಿಗೆ ಚರ್ಚಿಸಿದ ಬಳಿಕ ಶನಿವಾರ ಸುದ್ದಿಗಾರರ ಜತೆ ಮಾತನಾಡಿದರು. ಸೋಮವಾರದ ಕಲಾಪದಲ್ಲಿ ಏನೆಲ್ಲ ಬೆಳವಣಿಗೆಯಾಗುತ್ತದೆ ಎಂಬುದನ್ನು ಕಾದು ನೋಡಲಿದ್ದೇವೆ. ಜತೆಗೆ ಸುಪ್ರೀಂಕೋರ್ಟ್ ಮಂಗಳವಾರ ನೀಡಲಿರುವ ತೀರ್ಪನ್ನು ಗಮನಿಸಲಿದ್ದೇವೆ. ಆನಂತರದಲ್ಲಿ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸುವುದಾಗಿ ತಿಳಿಸಿದರು.
ಎಂಟಿಬಿ ನಾಗರಾಜ್ ಯು ಟರ್ನ್ ಹೊಡೆದು ರಾಜೀನಾಮೆ ಹಿಂಪಡೆಯುವುದಾಗಿ ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸ್ವತಃ ಎಂಟಿಬಿ ನಾಗರಾಜ್ ಶನಿವಾರ ಬೆಳಗ್ಗೆ ತಮ್ಮ ರಾಜೀನಾಮೆ ಅಂಗೀಕರಿಸುವಲ್ಲಿ ವಿಧಾಸಭಾಧ್ಯಕ್ಷರು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಸಚಿವ ಡಿ.ಕೆ. ಶಿವಕುಮಾರ್ ಅವರು ತಮ್ಮ ಮನವೊಲಿಸಿದ್ದು, ತಾವು ಕಾಂಗ್ರೆಸ್ನಲ್ಲೇ ಉಳಿಯಲು ನಿರ್ಧರಿಸಿರುವುದಾಗಿ ಹೇಳುತ್ತಿದ್ದಾರೆ. ಈ ರೀತಿಯ ದ್ವಂದ್ವದ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅದೇನೇ ಆದರೂ ಈ ಸರ್ಕಾರ ಪತನಗೊಳ್ಳುವುದು ಖಚಿತ ಎಂದರು.