ಬೆಂಗಳೂರು: ಕೇಂದ್ರ ಸರ್ಕಾರದ ನ್ಯಾಷನಲ್ ಮೆಡಿಕಲ್ ಕಮಿಷನ್ ( ಎನ್ಎಂಸಿ) ಕಾಯ್ದೆಗೆ ಲೋಕಸಭೆಯಲ್ಲಿ ಅಂಗೀಕಾರ ದೊರಕಿದ್ದು, ಇದನ್ನು ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ನಾಳೆ ಪ್ರತಿಭಟನೆಗೆ ಕರೆ ನೀಡಿದೆ. ಹೀಗಾಗಿ ನಾಳೆ ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ಸೇವೆ ಸ್ಥಗಿತಗೊಳ್ಳಲಿದೆ.
ಬುಧವಾರ ಬೆಳಗ್ಗೆ 6 ಗಂಟೆಯಿಂದ ಗುರುವಾರ ಬೆಳಗ್ಗೆ 6 ಗಂಟೆಯವರೆಗೂ ಪ್ರತಿಭಟನೆ ನಡೆಸಲಾಗಿದ್ದು, ಈ ಸಮಯದಲ್ಲಿ ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ಸೇವೆ ಬಂದ್ ಆಗಲಿದೆ. ತುರ್ತು ಸೇವೆ ಮಾತ್ರ ಲಭ್ಯವಾಗಲಿದೆ.
ಸೋಮವಾರ ಲೋಕಸಭೆಯಲ್ಲಿ ಆರೋಗ್ಯಸೇವೆ ಮತ್ತು ವೈದ್ಯಕೀಯ ಶಿಕ್ಷಣವನ್ನು ದೇಶದಲ್ಲಿ ಕತ್ತಲೆಗೆ ತಳ್ಳಲಾಗಿದೆ ಎಂದು ಐಎಂಎ ವಿಷಾದ ವ್ಯಕ್ತಪಡಿಸಿದೆ. ಅಲ್ಲದೇ. ಕಾಯ್ದೆಯಲ್ಲಿನ ಸೆಕ್ಷನ್ 32 ಸುಮಾರು 3.5 ವೃತ್ತಿಪರವಲ್ಲದ ಅರೆ ವೈದ್ಯಕೀಯ ವ್ಯಕ್ತಿಗಳಿಗೆ ಪರವಾನಗಿ ಒದಗಿಸಲಿದೆ ಎಂದು ಕಳವಳ ವ್ಯಕ್ತಪಡಿಸಿದೆ.
ಈ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು ಎಂದು ಆಗ್ರಹಿಸಿ ದೇಶವ್ಯಾಪಿ ವೈದ್ಯರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ನಾಳೆ ಎಲ್ಲ ಖಾಸಗಿ ಆಸ್ಪತ್ರೆಗಳು ಬಂದ್ ಆಗಲಿದ್ದು, ಜನರ ಆರೋಗ್ಯ ಸೇವೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ.
ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ರಜೆ ಇಲ್ಲ
ನಾಳೆ ಖಾಸಗಿ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ರಜೆಯಲಿರುವ ಜಿಲ್ಲಾ ಆರೋಗ್ಯಾಧಿಕಾರಿ, ಹಾಗೂ ಸರ್ಕಾರಿ ವೈದ್ಯರ ರಜೆ ಕಡಿತಗೊಳಿಸಿ ಸೇವೆಗೆ ಹಾಜರಾಗಲು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಅಲ್ಲದೇ, ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿ ಹೆಚ್ಚುವರಿ ಸೇವೆ ನೀಡಲು ಸೂಚನೆ ನೀಡಲಾಗಿದೆ.