ನಾಳೆ ಯಲ್ಲೋ ಅಲರ್ಟ್: ಇನ್ನೆರಡು ದಿನಗಳಲ್ಲಿ ರಾಜ್ಯ ಸಹಜ ಸ್ಥಿತಿಗೆ

ಬೆಳಗಾವಿ.ಆ,11: ರಾಜ್ಯದ ಎದುರಾಗಿರುವ ಭೀಕರ ಪ್ರವಾಹ ಸ್ಥಿತಿ ಇನ್ನು ಎರಡು ದಿನಗಳಲ್ಲಿ ಸಹಜ ಸ್ಥಿತಿಗೆ ಬರಲಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಅವರು ಸಿಎಂ ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದರು.

ಬೆಳಗಾವಿಯ ಸಾಂಬಾ ವಿಮಾನ ನಿಲ್ದಾಣದ ಸಭಾಂಗಣದಲ್ಲಿ ಸಿಎಂ ಮತ್ತು ಇತರೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಅವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿ ಹಾಗೂ ಜಲಾಶಯಗಳಲ್ಲಿನ ನೀರಿನ ಮಟ್ಟದ ಕುರಿತು ಮಾಹಿತಿ ಒದಗಿಸಿದರು.

ರಾಜ್ಯದಲ್ಲಿ ಇಂದು ಆರೇಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ ಯಲ್ಲೋ (ಹಳದಿ) ಅಲರ್ಟ್ ಇರುತ್ತದೆ. ಇಂದು ಸ್ಥಿತಿ ಸಾಮಾನ್ಯವಾಗಿದ್ದು, ನಾಳೆ ಮತ್ತು ನಾಳಿದ್ದು ಇಡೀ ರಾಜ್ಯದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬರಲಿದೆ ಎಂದು ಮುಖ್ಯ ಕಾರ್ಯದರ್ಶಿಗಳು ತಿಳಿಸಿದರು.

ಬೆಳಗಾವಿ ಸೇರಿದಂತೆ ರಾಜ್ಯದಾದ್ಯಂತ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್, ವಾಯುಸೇನೆ, ಪೊಲೀಸ್ ಸೇರಿದಂತೆ ವಿವಿಧ ರಕ್ಷಣಾ ತಂಡಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಪ್ರಾಥಮಿಕ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇದುವರೆಗೆ 34 ಜನರು ಮೃತಪಟ್ಟಿದ್ದಾರೆ. ಈವರೆಗೆ 3 ಲಕ್ಷಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ. ಪ್ರವಾಹ ಹಾಗೂ ಮಳೆಯಿಂದಾಗಿ ಮರಣ ಹೊಂದಿದವರ ಕುಟುಂಬದವರಿಗೆ 48 ಗಂಟೆಗಳಲ್ಲಿ ಐದು ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಲಾಗುತ್ತಿದೆ. ಪರಿಹಾರ ಕೇಂದ್ರಗಳನ್ನು ಆರಂಭಿಸಿ, ಸಂತ್ರಸ್ತ ಜನರಿಗೆ ಊಟ, ವಸತಿ ಮತ್ತು ಬಟ್ಟೆಗಳನ್ನು ಒದಗಿಸಲಾಗುತ್ತಿದೆ. ವೈದ್ಯಕೀಯ ಸೌಲಭ್ಯ ಕೂಡ ನೀಡಲಾಗುತ್ತಿದ್ದು, ಇದಲ್ಲದೇ ಜಾನುವಾರುಗಳಿಗೂ ಆಶ್ರಯ ಒದಗಿಸಿದ್ದು, ಮೇವು ವಿತರಣೆ ಮಾಡಲಾಗುತ್ತಿದೆ ಎಂದರು.

ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಗಳಲ್ಲಿ ತಕ್ಷಣವೇ ಪರಿಹಾರ ಮತ್ತು ಪುನರ್ವಸತಿ ಕಾರ್ಯ ಕೈಗೊಳ್ಳಲು ಈಗಾಗಲೇ 100 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಪ್ರಾಥಮಿಕ ಸಮೀಕ್ಷೆ ಪ್ರಕಾರ ಪ್ರವಾಹಪೀಡಿತ ವಿವಿಧ ಜಿಲ್ಲೆಗಳಲ್ಲಿ 4.15 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಮತ್ತು ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. 136 ಪ್ರಮುಖ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ರಸ್ತೆಗಳು ಪ್ರವಾಹ ಮತ್ತು ಭೂ ಕುಸಿತದಿಂದ ಹಾನಿಗೊಳಗಾಗಿವೆ. ರಸ್ತೆ, ಸೇತುವೆ, ಶಾಲೆಗಳು, ಪೈಪ್ ಲೈನ್, ವಿದ್ಯುತ್ ಕಂಬಗಳು ಸೇರಿದಂತೆ ಮೂಲಭೂತ ಸೌಕರ್ಯಗಳ ಹಾನಿಯ ಸಮೀಕ್ಷೆ ಪ್ರಗತಿಯಲ್ಲಿದೆ ಎಂದು ವಿಜಯ್ ಭಾಸ್ಕರ್ ಅವರು ಸಿಎಂಗೆ ಮಾಹಿತಿ ನೀಡಿದರು.

One thought on “ನಾಳೆ ಯಲ್ಲೋ ಅಲರ್ಟ್: ಇನ್ನೆರಡು ದಿನಗಳಲ್ಲಿ ರಾಜ್ಯ ಸಹಜ ಸ್ಥಿತಿಗೆ

Leave a Reply

Your email address will not be published. Required fields are marked *

error: Content is protected !!