ರಾಜ್ಯ ವಿಧಾನ ಸಭೆ ಅಧಿವೇಶನ ಆರಂಭ-ಖಾಸಗಿ ಮಾಧ್ಯಮಗಳಿಗಿಲ್ಲ ಪ್ರವೇಶ

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನ ಮಂಡಲ ಅಧಿವೇಶನ ಬೆಂಗಳೂರಿನಲ್ಲಿ ನಡೆಯಲಿದೆ.ನೆರೆ ಹಾವಳಿ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿದ್ದ ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲಿಯೇ ನಡೆಸಲು ನಿರ್ಧರಿಸಲಾಗಿದ್ದು, ಉಪಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ 10 ದಿನಗಳು ನಡೆಯಬೇಕಿದ್ದ ಅಧಿವೇಶನವನ್ನು ಕೇವಲ ಮೂರು ದಿನಗಳಿಗೆ ಸೀಮಿತಗೊಳಿಸಲಾಗಿದೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿ ಸರ್ಕಾರ ಅಧಿವೇಶನ ನಡೆಸುತ್ತಿದ್ದು, ಖಾಸಗಿ ಮಾಧ್ಯಮಗಳಿಗೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಿರ್ಬಂಧ ಹೇರಿದ್ದಾರೆ. ಈ ಹಿಂದೆ ಕೂಡ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿಧಾನಸೌಧ ಕಲಾಪದಲ್ಲಿ ದೃಶ್ಯ ಮಾಧ್ಯಮ ನಿರ್ಬಂಧಕ್ಕೆ ಚಿಂತನೆ ನಡೆಸಲಾಗಿತ್ತು. ಆದರೆ ಬಿಜೆಪಿ ನಾಯಕರು ಇದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿತ್ತು. ಆದರೀಗ ಅದೇ ಬಿಜೆಪಿ ಸರ್ಕಾರ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವುದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ. 

ಮತ್ತೊಂದೆಡೆ, ಪ್ರವಾಹ ಪರಿಹಾರವಾಗಿ ಕೇಂದ್ರ ಸರ್ಕಾರ ಕೇವಲ 1200 ಕೋಟಿ ರೂ. ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಪಕ್ಷಗಳು ಬಿಜೆಪಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಯಿದ್ದು, ಮುಂಬೈ, ಹೈದರಾಬಾದ್ ಮತ್ತು ಉತ್ತರ ಕರ್ನಾಟಕ ಭಾಗಗಳಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿ ಸದನದಲ್ಲಿ ಭಾರಿ ಕೋಲಾಹಲ ಎಬ್ಬಿಸಲಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!