janadhvani

Kannada Online News Paper

ಉಪಚುನಾವಣೆ: ಅನರ್ಹರ ಭವಿಷ್ಯ ನಾಳೆ ಪ್ರಕಟ

ಬೆಂಗಳೂರು, ಡಿ.8- ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಾಯಿಸಬಹುದೆಂದು ನಿರೀಕ್ಷಿಸಲಾಗಿ ರುವ ಉಪಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದಿರುವ ಉಪಚುನಾವಣೆಯ ಮತ ಎಣಿಕೆ ನಾಳೆ ಬೆಳಗ್ಗೆ 8 ಗಂಟೆಯಿಂದ ಆಯಾ ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳಲ್ಲಿ ಆರಂಭವಾಗಲಿದೆ. ಮತ ಎಣಿಕೆಗಾಗಿ ಆಯಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಎಲ್ಲ ಸಿದ್ಧತೆಗಳನ್ನೂ ಮಾಡಿಕೊಂಡಿದ್ದಾರೆ.

ಸೂಕ್ತ ಪೊಲೀಸ್ ಬಂದೋಬಸ್ತ್‍ನೊಂದಿಗೆ ಮತ ಎಣಿಕೆ ನಾಳೆ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಗಳಿವೆ. ಮತ ಎಣಿಕೆ ಕೇಂದ್ರಗಳಿಗೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕರು, ಸೂಕ್ಷ್ಮ ವೀಕ್ಷಕರನ್ನು ನೇಮಿಸಲಾಗಿದೆ.

ಮತ ಎಣಿಕೆ ಕೇಂದ್ರಗಳಿಗೆ ಮೊಬೈಲ್ ತರುವುದನ್ನು ಕಡ್ಡಾಯವಾಗಿದೆ ನಿಷೇಧಿಸಲಾಗಿದೆ. ಡಿ.5ರಂದು 15 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಒಟ್ಟಾರೆ ಶೇ.67.91ರಷ್ಟು ಮತದಾನವಾಗಿತ್ತು. ಹೊಸಕೋಟೆ ಕ್ಷೇತ್ರದಲ್ಲಿ ಶೇ.90.90ರಷ್ಟು ಅತಿ ಹೆಚ್ಚು ಮತದಾನವಾಗಿದ್ದರೆ, ಕೆಆರ್ ಪುರ ಕ್ಷೇತ್ರದಲ್ಲಿ ಶೇ.46.74ರಷ್ಟು ಕಡಿಮೆ ಮತದಾನವಾಗಿತ್ತು.

ಚುನಾವಣಾ ಕಣದಲ್ಲಿ ಬಿಜೆಪಿ, ಕಾಂಗ್ರೆಸ್‍ನ ತಲಾ 15 ಅಭ್ಯರ್ಥಿಗಳು ಸ್ಪರ್ಧಿಸಿದ್ದರೆ, ಜೆಡಿಎಸ್‍ನ 12 ಮಂದಿ ಸ್ಪರ್ಧಿಸಿದ್ದರು. ಪಕ್ಷೇತರರು ಸೇರಿದಂತೆ 165 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಮತದಾನದ ನಂತರ ಬಿಜೆಪಿ 13 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರೆ, ಕಾಂಗ್ರೆಸ್ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸ ಹೊಂದಿದೆ. ಜೆಡಿಎಸ್ 5 ಕ್ಷೇತ್ರಗಳಲ್ಲಿ ಜಯ ಗಳಿಸುವ ನಿರೀಕ್ಷೆ ಹೊಂದಿದೆ.

ಮಿನಿ ಮಹಾ ಸಮರವೆಂದೇ ಪರಿಗಣಿಸಲಾಗಿದ್ದ ಉಪ ಚುನಾವಣೆಯನ್ನು ಮೂರೂ ರಾಜಕೀಯ ಪಕ್ಷಗಳು ಪ್ರತಿಷ್ಠೆಯಾಗಿ ಪರಿಗಣಿಸಿ ಪ್ರಚಾರ ನಡೆಸಿದ್ದವು. ಅಲ್ಲದೆ, ಚುನಾವಣಾ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿದೆ ಎಂಬ ಲೆಕ್ಕಾಚಾರವನ್ನು ರಾಜಕೀಯ ವಲಯದಲ್ಲಿ ಹಾಕಲಾಗಿತ್ತು. ಹೀಗಾಗಿ ನಾಳೆ ಪ್ರಕಟವಾಗುವ ಉಪ ಚುನಾವಣಾ ಫಲಿತಾಂಶ ತೀವ್ರ ಕುತೂಹಲ ಕೆರಳಿಸಿದೆ.

error: Content is protected !! Not allowed copy content from janadhvani.com