janadhvani

Kannada Online News Paper

ಜಾಮಿಯಾ ಮಿಲ್ಲಿಯಾ ಹಿಂಸಾಚಾರ: 10 ಮಂದಿ ಬಂಧನ

ನವದೆಹಲಿ: ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಬಂಧಿತರಲ್ಲಿ ವಿದ್ಯಾರ್ಥಿಗಳು ಸೇರಿಲ್ಲ.

ಜಾಮಿಯಾ ಮತ್ತು ನ್ಯೂ ಫ್ರೆಂಡ್ಸ್‌ ಕಾಲನಿಯ 10 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ ಮೂವರು ಅಪರಾಧ ಹಿನ್ನೆಲೆಯುಳ್ಳವರಾಗಿದ್ದಾರೆ. ಉಳಿದವರ ಪೂರ್ವಾಪರ ಪರಿಶೀಲಿಸಲಾಗುತ್ತಿದೆ. ಬಂಧಿತರ ವಿರುದ್ಧ ಗಲಭೆ ಮತ್ತು ಗುಂಪು ಹಿಂಸಾಚಾರದ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಚಿನ್ಮಯ್ ಬಿಸ್ವಾಲ್ ಹೇಳಿದ್ದಾರೆ.

ಬಂಧಿತರಿಂದ ಗಲಭೆಯಲ್ಲಿ ಭಾಗಿಯಾಗಿರುವ ಇತರರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಗಲಭೆ ವೇಳೆ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆವರಣದಲ್ಲಿ ಭಾನುವಾರ ನಡೆದಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಘಟನೆಯಲ್ಲಿ ಹತ್ತಾರು ಮಂದಿ ಗಾಯಗೊಂಡಿದ್ದರು. ಗಲಭೆ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದರು. ಬಳಿಕ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ವಿರುದ್ಧ ದೇಶದ ವಿವಿಧೆಡೆ ಸೋಮವಾರ ಪ್ರತಿಭಟನೆಗಳು ನಡೆದಿದ್ದವು. ಪೊಲೀಸ್ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿಯೂ ಅರ್ಜಿ ಸಲ್ಲಿಕೆಯಾಗಿದೆ.

error: Content is protected !! Not allowed copy content from janadhvani.com