janadhvani

Kannada Online News Paper

CAA: ಪ್ರಜಾಪ್ರಭುತ್ವ ಉಳಿವಿಗಾಗಿ ಒಂದಾಗುವ- 11 ರಾಜ್ಯಗಳ ಸಿಎಂಗಳಿಗೆ ಕೇರಳ ಸಿಎಂ ಪತ್ರ

ಕೊಚ್ಚಿ: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ ಬೆನ್ನಲ್ಲೇ ಸಿಎಎ ವಿರೋಧಿಸಿ 11 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಜಾತ್ಯತೀತತೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲರೂ ಒಂದಾಗಬೇಕು ಎಂದು ಹೇಳಿದ್ದಾರೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ 11 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಕೇರಳ ಸಿಎಂ, ಸಿಎಎ ಹಾಗೂ ಎನ್‌ಆರ್‌ಸಿ ವಿರುದ್ಧ ದೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ದೇಶದ ಜಾತ್ಯತೀತತೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲರೂ ಒಗ್ಗಟ್ಟಾಗಬೇಕಾದ ಅಗತ್ಯವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಡಿಸೆಂಬರ್ 31 ರಂದು ಕೇರಳ ವಿಧಾನಸಭೆಯಲ್ಲಿ ಸಿಎಎ ವಿರುದ್ಧ ನಿರ್ಣಯ ಕೈಗೊಂಡ ವಿಚಾರವನ್ನು ಪತ್ರದಲ್ಲಿ ಉಲ್ಲೇಖಿಸಿರುವ ಅವರು, ಕಾಯ್ದೆ ಜಾರಿಯಿಂದ ದೇಶದ ಜಾತ್ಯತೀತ ಪರಂಪರೆಯ ಮೇಲಾಗುವ ಪರಿಣಾಮಗಳ ಕುರಿತಾಗಿ ಎಚ್ಚರಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಗೆ ಈಗಾಗಲೇ 12 ರಾಜ್ಯಗಳು ವಿರೋಧ ವ್ಯಕ್ತಪಡಿಸಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಯ್ದೆ ವಿರೋಧಿಸಿ ಶುಕ್ರವಾರ ಸಿಲುಗುರಿಯಲ್ಲಿ ಪ್ರತಿಭಟನೆ ನಡೆಸಿದರು.ಈ ಮಧ್ಯೆ ಯಾವುದೇ ಕಾರಣಕ್ಕೂ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.

error: Content is protected !! Not allowed copy content from janadhvani.com