janadhvani

Kannada Online News Paper

ಬೆಂಗಳೂರು,ಜ.14: ಮಂಗಳೂರು ಗೋಲಿಬಾರ್ ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಕಳೆದ ಡಿಸೆಂಬರ್ 19ನೇ ತಾರೀಕಿನಂದು ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಹೋರಾಟ ವೇಳೆ ನಡೆದ ಗೋಲಿಬಾರ್ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಆದೇಶಿಸುವಂತೆ ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ಈ ಕುರಿತಾದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಮಂಗಳೂರು ಗೋಲಿಬಾರ್ನಲ್ಲಿ ಇಬ್ಬರು ಅಮಾಯಕರು ಮೃತಪಟ್ಟಿದ್ಧಾರೆ. ಪ್ರತಿಭಟನಾಕಾರರ ಮೇಲಿನ ಪೊಲೀಸರ ದೌರ್ಜನ್ಯದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೋರಿ ಹೈಕೋರ್ಟ್ಗೆ ಜೆಡಿಎಸ್ ಮುಖಂಡ ಮುಹಮ್ಮದ್ ಇಕ್ಬಾಲ್ ಮತ್ತು ಉಮರ್ ಎಂಬುವರು ಅರ್ಜಿ ಸಲ್ಲಿಸಿದರು. ಈ ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಪೊಲೀಸರ ಗೋಲಿಬಾರ್ ಕುರಿತಂತೆ ಸೂಕ್ತ ದಾಖಲೆಗಳನ್ನು ನೀಡುವಂತೆ ಆದೇಶಿಸಿದೆ. ಇದೇ ತಿಂಗಳು ಜನವರಿ 28ನೇ ತಾರೀಕಿನೊಳಗೆ ದಾಖಲೆ ಸಮೇತ ಮಾಹಿತಿ ನೀಡುವಂತೆ ಆದೇಶಿಸಿ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 5.ಕ್ಕೆ ಮುಂದೂಡಿದೆ.

ಕಳೆದ ಡಿಸೆಂಬರ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದಂತೆಯೇ ರಾಜ್ಯದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿಭಟನೆಯ ಕಾವು ಹೆಚ್ಚುತ್ತಿದ್ದಂತೆ ಕರ್ಫ್ಯೂ ಜಾರಿ ಮಾಡಲಾಗಿತ್ತು. ಈ ವೇಳೆ ಮಂಗಳೂರಿನಲ್ಲಿ ಪೊಲೀಸರ ಗುಂಡೇಟಿಗೆ ಇಬ್ಬರು ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಈ ಬೆನ್ನಲ್ಲೇ ಮಂಗಳೂರಿನಲ್ಲಿ ಪೊಲೀಸರ ಗುಂಡೇಟಿಗೆ ಬಲಿಯಾದ ಜಲೀಲ್ ಮತ್ತು ನೌಶೀನ್ ವಿರುದ್ಧವೇ ಎಫ್ಐಆರ್ ದಾಖಲಿಸುವ ಮೂಲಕ ಪೊಲೀಸರು ವಿವಾದಕ್ಕೆ ಕಾರಣರಾಗಿದ್ದರು. ಡಿ. 19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ತಮ್ಮ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಮಂಗಳೂರಿನ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ, ಪೊಲೀಸರನ್ನು ಕೊಲ್ಲಲು ಸಂಚು ರೂಪಿಸಿದ್ದ ಗುಂಪಿನ ಮೇಲೆ ಗುಂಡು ಹಾರಿಸಿದಾಗ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಎಫ್ಐಆರ್ನಲ್ಲಿ ದಾಖಲಿಸಲಾಗಿತ್ತು.

ಈ ಘಟನೆಗೆ ಸಂಬಂಧಿಸಿದಂತೆ ಮೃತ ಅಬ್ದುಲ್ ಜಲೀಲ್ ಮತ್ತು ನೌಶೀನ್ ಸೇರಿದಂತೆ 29 ಜನರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಪೊಲೀಸ್ ಗುಂಡಿನ ದಾಳಿಗೆ ಬಲಿಯಾದ ಜಲೀಲ್ ನ್ನು 3ನೇ ಆರೋಪಿಯೆಂದು ಹಾಗೂ ನೌಶೀನ್ ನ್ನು 8ನೇ ಆರೋಪಿಯೆಂದು ನಮೂದಿಸಲಾಗಿದೆ. ಮೃತ ವ್ಯಕ್ತಿಗಳ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು, ಅವರ ಸಾವಿಗೆ ನ್ಯಾಯ ದೊರಕಿಸಬೇಕೆಂಬ ಆಗ್ರಹ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೃತರ ವಿರುದ್ಧವೇ ಎಫ್ಐಆರ್ ದಾಖಲಿಸಿರುವುದು ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಈ ಮಧ್ಯೆಯೇ ಪೊಲೀಸರ ದೌರ್ಜನ್ಯದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೋರಿ ಜೆಡಿಎಸ್ ಮುಖಂಡ ಮುಹಮ್ಮದ್ ಇಕ್ಬಾಲ್ ಹೈಕೋರ್ಟ್ ಮೆಟ್ಟಿಲೇರಿದರು.

error: Content is protected !!
%d bloggers like this: