ಬೆಂಗಳೂರು,ಜ.29: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ)ದ ರಾಜ್ಯಾಧ್ಯಕ್ಷ ಮುಹಮ್ಮದ್ ಶಾಕೀಬ್ ವಿರುದ್ಧ ಮಂಗಳೂರಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆಗೆ ಹೈಕೋರ್ಟ್ ನಾಲ್ಕು ವಾರಗಳ ಕಾಲ ತಡೆ ನೀಡಿ, ಮಧ್ಯಂತರ ಆದೇಶ ಹೊರಡಿಸಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜ.15ರಂದು ನಡೆದ ಪ್ರತಿಭಟನೆಯಲ್ಲಿ ಭಾಷಣ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಕ್ರಿಮಿನಲ್ ಪ್ರಕರಣಕ್ಕೆ ತಡೆ ನೀಡಿ ಆದೇಶಿಸಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ರ‍್ಯಾಲಿ ನಡೆದಾಗ ಸಿಎಎ ವಿರುದ್ಧ ಹಾಗೂ ಗೋಲಿಬಾರ್ ನಡೆಸಿದ ಬಗ್ಗೆ ಮಾತನಾಡಲಾಗಿದೆಯೇ ವಿನಹ ಬೇರೆ ಯಾವುದೇ ವಿಚಾರವನ್ನೂ ಮಾತನಾಡಿಲ್ಲ. ಆದರೂ ಕಂಕನಾಡಿ ಪೊಲೀಸರು ಶಾಕೀಬ್ ವಿರುದ್ಧ ಸಮುದಾಯಗಳ ನಡುವೆ ದ್ವೇಷವನ್ನು ಪ್ರಚೋದಿಸಿದ್ದಾರೆ ಎಂದು ತೋರಿಸಲು, ಐಪಿಸಿ ಸೆಕ್ಷನ್ 153ಎ, 353 ಮತ್ತು 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಶಾಕೀಬ್ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿತು.