ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ. ಕಾಂಗ್ರೆಸ್–ಜೆಡಿಎಸ್‌ನಿಂದ ಬಂಡೆದ್ದು ಬಿಜೆಪಿಗೆ ವಲಸೆ ಬಂದ ಬಳಿಕ ಉಪಚುನಾವಣೆಯಲ್ಲಿ ಗೆದ್ದು ‘ಅರ್ಹ’ರಾದ 10 ಶಾಸಕರು ಸಚಿವರಾಗುತ್ತಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸಮಾರಂಭ ನಡೆಯಿತು. ರಾಜ್ಯಪಾಲ ವಜುಭಾಯ್ ವಾಲಾ ಅವರು ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಮೊದಲಿಗೆ ಶಾಸಕ ಎಸ್ ಟಿ ಸೋಮಶೇಖರ್ ದೇವರ ಹೆಸರಿನಿಲ್ಲಿ ಪ್ರಮಾಣ ವಚನ ಸ್ವೀಕರಿಸಿದರು, ನಂತರ, ರಮೇಶ್ ಜಾರಕಿಹೊಳಿ, ಆನಂದ್ ಸಿಂಗ್, ಕೆ.ಸುಧಾಕರ್, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್ ಬಿ.ಸಿ ಪಾಟೀಲ್. ಕೆ.ಗೋಪಾಲಯ್ಯ. ನಾರಾಯಣಗೌಡ ಮತ್ತು ಶ್ರೀಮಂತ್ ಪಾಟೀಲ್ ಕ್ರಮವಾಗಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಶಾಸಕರ ಪ್ರಮಾಣ ವಚನ ಸಮಾರಂಭದಲ್ಲಿ ಬಿ.ಎಸ್ ಯಡಿಯೂರಪ್ಪ ಸರ್ಕಾರದ ಹಲವು ಸಂಪುಟ ಸಚಿವರು ಭಾಗಿಯಾಗಿದ್ದರು.