janadhvani

Kannada Online News Paper

ಶಾಹೀನ್ ಬಾಗ್‌ ಪ್ರತಿಭಟನೆ: ರಸ್ತೆ ತಡೆ ಬೇಡ- ಸುಪ್ರೀಂ ಕೋರ್ಟ್

ನವದೆಹಲಿ: ಪ್ರತಿಭಟನೆ ಹೆಸರಿನಲ್ಲಿ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆ ಉಂಟುಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಶಾಹೀನ್ ಬಾಗ್‌ನಲ್ಲಿ ಪ್ರತಿಭಟನೆಯಲ್ಲಿ ತೊಡಗಿರುವವರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ, ದೆಹಲಿ ಸರ್ಕಾರ ಮತ್ತು ಪೊಲೀಸರಿಗೆ ನೊಟೀಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ಇದೇ 17ರಂದು ನಿಗದಿಪಡಿಸಲಾಗಿದೆ.

ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ವಿರೋಧಿಸಿ ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಮಂದಿ ಶಾಹೀನ್ ಬಾಗ್‌ನಲ್ಲಿ ಸುಮಾರು 50 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.ಪ್ರತಿಭಟನಾಕಾರರ ತೆರವಿಗೆ ಆದೇಶಿಸಬೇಕು ಎಂದು ವಕೀಲ ಅಮಿತ್ ಸಾಹ್‌ನಿ, ಬಿಜೆಪಿ ನಾಯಕ ನಂದ ಕಿಶೋರ್ ಗರ್ಗ್‌ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಚುನಾವಣೆ ಮುಗಿದ ಬಳಿಕ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಈ ಹಿಂದೆ ತಿಳಿಸಿತ್ತು.

‘ಒಂದೂವರೆ ತಿಂಗಳಿಗೂ ಹೆಚ್ಚು ಸಮಯದಿಂದ ದೆಹಲಿಯ ಶಾಹೀನ್ ಬಾಗ್, ಕಾಳಿಂದಿ ಕುಂಜ್ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ದೆಹಲಿ ಹಾಗೂ ನೋಯ್ಡಾಗಳ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುವುದರಿಂದ ಜನರ ದಿನನಿತ್ಯದ ಕೆಲಸಗಳಿಗೆ ತೊಂದರೆ ಉಂಟಾಗುತ್ತಿದ್ದು, ಇದನ್ನು ತಪ್ಪಿಸಲು ಸಮಗ್ರ ಮಾರ್ಗಸೂಚಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕು’ ಎಂದು ಗರ್ಗ್‌ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

error: Content is protected !! Not allowed copy content from janadhvani.com