janadhvani

Kannada Online News Paper

ಕೊರೋನಾ ಭೀತಿ: ಶಾಲಾ,ಕಾಲೇಜ್ ಗಳಿಗೆ ಮಾ.14 ರಿಂದ 28 ರ ವರೆಗೆ ರಜೆ

ಬೆಂಗಳೂರು: ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಎಲ್ಲೆಡೆ ಹರಡುತ್ತಿರುವ ಪರಿಣಾಮ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಮುನ್ನೆಚ್ಚರಿಕೆಯಾಗಿ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆ ರಜೆ ಘೋಷಣೆ ಮಾಡಿದೆ.

ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾರ್ಚ್ 14 ರಿಂದ ಮಾರ್ಚ್ 28ವರೆಗೆ 15 ದಿನಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದರೆ ಎಂದಿನಂತೆ ಕಾಲೇಜು ಕಚೇರಿಗಳಲ್ಲಿ ಕೆಲಸ ಕಾರ್ಯಗಳು ನಿರ್ವಹಿಸಲಿವೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಶುಕ್ರವಾರ ಸುತ್ತೋಲೆ ಹೊರಡಿಸಿದ್ದು, 1 ರಿಂದ 6ನೇ ತರಗತಿಯ ಎಲ್ಲ ಶಾಲೆಗಳಿಗೆ 2020 ಮಾರ್ಚ್ 14 ರಿಂದ ಜಾರಿಗೆ ಬರುವಂತೆ ತರಗತಿಗಳನ್ನು ಸ್ಥಗಿತಗೊಳಿಸಲಾಗುವುದು. ಒಂದು ವೇಳೆ ಪರೀಕ್ಷೆಗಳು ನಡೆಯುತ್ತಿದ್ದರೆ ಪರೀಕ್ಷೆಗಳನ್ನು ರದ್ದುಗೊಳಿಸಿ ಬೇಸಿಗೆ ರಜೆ ಘೋಷಿಸಬೇಕು ಎಂದು ಸೂಚಿಸಿದೆ.

7ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 14ರಿಂದ ತರಗತಿಗಳನ್ನು ಸ್ಥಗಿತಗೊಳಿಸಿ ಪರೀಕ್ಷಾ ದಿನಗಳಂದು ಮಾತ್ರ ಹಾಜರಾಗಲು ಸೂಚಿಸಿದೆ.

7ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ದಿನಾಂಕ 23-03-2020ರೊಳಗೆ ಪರೀಕ್ಷೆಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಿ ಬೇಸಿಗೆ ರಜೆ ಘೋಷಿಸುವಂತೆ ಆದೇಶ ಹೊರಡಿಸಲಾಗಿದೆ. 10ನೇ ತರಗತಿಯ ವಿದ್ಯಾರ್ಥಿಗಳಿಗೆ ಈಗಾಗಲೇ ನಿಗದಿಯಾಗಿರುವ ವೇಳಾಪಟ್ಟಿಯಂತೆ ಪರೀಕ್ಷೆ ನಡೆಯಲಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಎಂದಿನಂತೆ ಮಾ.14 ರಂದು ನಡೆಯಲಿರುವ ಸೈಕಾಲಜಿ, ಎಲೆಕ್ಟ್ರಾನಿಕ್ಸ್ ಹಾಗೂ ಕಂಪ್ಯೂಟರ್ ಸೈನ್ಸ್ ಪರೀಕ್ಷೆಗಳು ನಡೆಯಲಿವೆ ಎಂದು ಪದವಿ ಪೂರ್ವ ಪರೀಕ್ಷಾ ಮಂಡಳಿಯ ನಿರ್ದೇಶಕಿ ಕನಗವಲ್ಲಿ ಹೇಳಿದ್ದಾರೆ.

error: Content is protected !! Not allowed copy content from janadhvani.com