janadhvani

Kannada Online News Paper

ಅಹಮದಾಬಾದ್: ಅಹಮದಾಬಾದ್’ನ ನವರಂಗಪುರದಲ್ಲಿರುವ ಶ್ರೇಯ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆ ಬಳಿಕ ಆಸ್ಪತ್ರೆಯಲ್ಲಿದ್ದ 35 ಮಂದಿ ರೋಗಿಗಳನ್ನು ಸ್ಥಳಾಂತರಿಸುವಲ್ಲಿ ಆಡಳಿತ ಮಂಡಳಿ ಯಶಸ್ವಿಯಾಗಿದೆ. ಆಸ್ಪತ್ರೆಯ ಇಂಟೆನ್ಸಿವ್ ಕೇರ್ ಯುನಿಟ್ (ಐಸಿಯು)ವಿನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಮಗಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಅದಾಗ್ಯೂ 8 ಮಂದಿ ರೋಗಿಗಳು ಸಜೀವ ದಹನಗೊಂಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಶ್ರೇಯ್ ಆಸ್ಪತ್ರೆಯನ್ನು ಕೋವಿಡ್ 19 ಚಿಕಿತ್ಸಾ ಕೇಂದ್ರವಾಗಿ ಮಾರ್ಪಡಿಸಲಾಗಿತ್ತು, ಅಗ್ನಿ ದುರಂತಕ್ಕೆ ನಿಖರ ಕಾರಣಗಳು ತಿಳಿದುಬಂದಿಲ್ಲ, ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.

ಅಹ್ಮದಾಬಾದ್ ಕೋವಿಡ್-19 ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ರೂ.2ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.ಅಲ್ಲದೆ, ಗಾಯಾಳುಗಳಿಗೆ ರೂ.50,000 ಪರಿಹಾರ ಘೋಷಣೆ ಮಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪರಿಹಾರ ಘೋಷಣೆ ಮಾಡಿದ ಬೆನ್ನಲ್ಲೇ ಗುಜರಾತ್ ರಾಜ್ಯ ಮುಖ್ಯಮಂತ್ರಿ ವಿಜಯ್ ರುಪಾನಿಯವರೂ ಕೂಡ ಮೃತರ ಕುಟುಂಬಕ್ಕೆ ರೂ.4 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ರೂ.4 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50,000 ಪರಿಹಾರ ನೀಡುವುದಾಗಿ ವಿಜಯ್ ರುಪಾನಿಯವರು ಹೇಳಿದ್ದಾರೆ.

error: Content is protected !! Not allowed copy content from janadhvani.com