ತಿರುವನಂತಪುರಂ : ಕೊರೋನಾ ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಚಾಲಕನೇ ಆ ರೋಗಿಯ ಮೇಲೆ ಅತ್ಯಾಚಾರವೆಸಗಿರುವ ಅಮಾನುಷ ಘಟನೆ ಕೇರಳದ ಪತ್ತನಾಂತಿಟ್ಟ ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ಕೇರಳದಲ್ಲಿ ಈ ಘಟನೆ ನಡೆದಿದ್ದು, ತನ್ನ ಸಂಬಂಧಿಕರ ಮನೆಯಲ್ಲಿ ಕ್ವಾರಂಟೈನ್ ಆಗಿದ್ದ ಯುವತಿಗೆ ನಿನ್ನೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಆಕೆಯನ್ನು ಆ್ಯಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಆ್ಯಂಬುಲೆನ್ಸ್ ಚಾಲಕ ಮಾರ್ಗಮಧ್ಯೆ ಆ್ಯಂಬುಲೆನ್ಸ್ನಲ್ಲೇ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.
ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ಸೇರಿಸಲು ಆ್ಯಂಬುಲೆನ್ಸ್ ಕರೆಸಲಾಗಿತ್ತು. ಆರೋಗ್ಯ ಕಾರ್ಯಕರ್ತರು ಇಬ್ಬರು ಕೊರೋನಾ ಸೋಂಕಿತ ಯುವತಿಯರನ್ನು ಆ್ಯಂಬುಲೆನ್ಸ್ನಲ್ಲಿ ಕಳುಹಿಸಿದ್ದರು. ಒಬ್ಬಳನ್ನು ಒಂದು ಆಸ್ಪತ್ರೆಯಲ್ಲಿ ಇಳಿಸಿದ ಆ್ಯಂಬುಲೆನ್ಸ್ ಚಾಲಕ ಇನ್ನೊಬ್ಬಾಕೆಯನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯುವುದಾಗಿ ಹೇಳಿ ಅಲ್ಲಿಂದ ಹೊರಟಿದ್ದ. ಆಗ ನಿರ್ಜನ ಪ್ರದೇಶಕ್ಕೆ ಆ್ಯಂಬುಲೆನ್ಸ್ ತೆಗೆದುಕೊಂಡು ಹೋಗಿ, ಅಲ್ಲಿ ಆ್ಯಂಬುಲೆನ್ಸ್ನಲ್ಲೇ ಆ ಸೋಂಕಿತ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅತ್ಯಾಚಾರ ನಡೆಸಿದ ನಂತರ ಚಾಲಕ ಆ್ಯಂಬುಲೆನ್ಸ್ನಲ್ಲಿ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ. ಈ ಘಟನೆಯಿಂದ ಆಘಾತಕ್ಕೊಳಗಾಗಿದ್ದಕೊರೋನಾ ಸೋಂಕಿತ ಯುವತಿ ಆಸ್ಪತ್ರೆಯ ಸಿಬ್ಬಂದಿ ಬಳಿ ನಡೆದ ಘಟನೆಯನ್ನು ವಿವರಿಸಿದ್ದಳು. ಅವರು ಪೊಲೀಸರಿಗೆ ಈ ವಿಷಯ ತಿಳಿಸಿದ್ದು, ಅತ್ಯಾಚಾರವೆಸಗಿದ್ದ ಆ್ಯಂಬುಲೆನ್ಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ವರದಿಯಲ್ಲೂ ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ಖಚಿತವಾಗಿದೆ.
ಚಾಲಕ, 25 ವರ್ಷದ ನೌಫಾಲ್ ನನ್ನು 108 ಆಂಬ್ಯುಲೆನ್ಸ್ ಸೇವೆಯಿಂದ ವಜಾಗೊಳಿಸಲಾಗಿದ್ದು,.ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪತ್ತನಾಂತಿಟ್ಟ ಪೊಲೀಸರು ತಿಳಿಸಿದ್ದಾರೆ.ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ ಕೇರಳ ಆರೋಗ್ಯ ಸಚಿವ ಕೆ.ಕೆ.ಶೈಲಜಾ ಅವರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಿದ್ದಾರೆ.
ಅತ್ಯಾಚಾರದ ಆರೋಪಿಯಾಗಿರುವ ಆ್ಯಂಬುಲೆನ್ಸ್ ಚಾಲಕ ಅಲಪ್ಪುಝ ಜಿಲ್ಲೆಯವನಾಗಿದ್ದು, ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ. ಆತನ ವಿರುದ್ಧ ಸೂಕ್ತ ತನಿಖೆ ನಡೆಸಿ, ಕ್ರಮ ಕೈಗೊಳ್ಳುವುದಾಗಿ ಕೇರಳದ ಆರೋಗ್ಯ ಇಲಾಖೆ ತಿಳಿಸಿದೆ. ಈ ಘಟನೆ ನಡೆದ 5 ಗಂಟೆಯೊಳಗೆ ಆರೋಪಿಯನ್ನು ಬಂಧಿಸಲಾಗಿದೆ. ಈ ಹಿಂದೆ ಕೂಡ ಕೊಲೆ ಆರೋಪದಲ್ಲಿ ಆತನನ್ನು ಬಂಧಿಸಲಾಗಿತ್ತು.