ಬೆಂಗಳೂರು,ಸೆ. 11: ರಾಜ್ಯದೆಲ್ಲೆಡೆ ಮೂರ್ನಾಲ್ಕು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಇಂದು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡದಲ್ಲಿ ಬೆಳಗ್ಗೆಯಿಂದಲೇ ಮಳೆ ಶುರುವಾಗಿದೆ.
ಕರಾವಳಿಯಲ್ಲಿ ಇಂದು ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಹೆಚ್ಚಾಗಲಿದೆ. ಎರಡು -ಮೂರು ದಿನಗಳಿಂದ ರಾಜ್ಯದ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಹಾಗೂ ಮತ್ತೆ ಕೆಲವೆಡೆ ಭಾರೀ ಮಳೆಯಾದ ವರದಿಯಾಗಿದೆ. ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಳೆಗೆ ಪೂರಕವಾದ ಸನ್ನಿವೇಶ ಸೃಷ್ಟಿಯಾಗಿದ್ದು, ಇದೇ ರೀತಿ ಮಳೆ ಮುಂದುವರೆಯಲಿದೆ.
ಮುಂದಿನ ಎರಡು ದಿನಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಗಳಿವೆ. ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಜುಲೈ ತಿಂಗಳಲ್ಲಿ ಅಬ್ಬರಿಸಿದ ಮಳೆ ಬಳಿಕ ಕಡಿಮೆಯಾಗಿತ್ತು. 15ರಿಂದ 20 ದಿನಗಳಿಂದ ಇಳಿಮುಖವಾಗಿದ್ದ ಮಳೆ ಮತ್ತೆ ಹೆಚ್ಚಾಗಿದೆ. ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.