janadhvani

Kannada Online News Paper

ಹಿಂದಿ,ಆಂಗ್ಲಭಾಷೆಯಲ್ಲಿ ಶಂಕುಸ್ಥಾಪನೆ- ಅಮಿತ್ ಶಾ, ಸಿಎಂ ರಿಂದ ಕನ್ನಡಕ್ಕೆ ದ್ರೋಹ

ಬೆಂಗಳೂರು,ಜ.17-ಶಿವಮೊಗ್ಗದ ಭದ್ರಾವತಿಯಲ್ಲಿ ನಿನ್ನೆ ನಡೆದ ಆರ್‌ಎಎಫ್ ಘಟಕಕ್ಕೆ ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿದ್ದು, ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು, ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ ಎಂದಿದ್ದಾರೆ.

ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಆರ್ ಎಎಫ್ ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

error: Content is protected !! Not allowed copy content from janadhvani.com