ಮಂಗಳೂರು: ರಾಜ್ಯದಲ್ಲಿ ಈ ಹಿಂದೆ ಗೋ ಸಾಗಾಟ ತಡೆದ ಗೋರಕ್ಷಕ ಕಾರ್ಯಕರ್ತರ ಮೇಲೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಅವರು ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ಈಗಾಗಲೇ ಜಾರಿಯಾಗಿದೆ. ಈ ಹಿಂದೆ ಕಾಯ್ದೆ ದುರ್ಬಲವಾಗಿತ್ತು. ಗೋವುಗಳನ್ನು ಸಾಗಿಸುವಾಗ ಕಾರ್ಯಕರ್ತರು ತಡೆದು ಪೊಲೀಸರಿಗೆ ಮಾಹಿತಿ ನೀಡುವ ಅನೇಕ ಸಂದರ್ಭಗಳಲ್ಲಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ. ಆ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗುವುದು ಎಂದು ಹೇಳಿದ್ದಾರೆ.
ಗೋ ಸಾಗಾಟಗಾರರ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ ಪ್ರಕರಣಗಳನ್ನು ಕೈಬಿಡುವ ಕುರಿತು ಪ್ರತ್ರಿಯೆ ನೀಡಿ, ಈ ಕುರಿತು ಗೃಹ ಸಚಿವರ ಬಳಿ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.