ಬೆಂಗಳೂರು: ಕೋವಿಡ್ ಹೆಚ್ಚಳವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಚ್ಚಲಾಗಿದ್ದ ಶಾಲಾ, ಕಾಲೇಜ್ ಗಳನ್ನು ನಿಧಾನವಾಗಿ ಪುನರಾರಂಭಿಸಲಾಗುತ್ತಿದ್ದು, ಫೆಬ್ರವರಿ 1ರಿಂದ 9ನೇ ತರಗತಿ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ಶಾಲೆಗಳನ್ನು ಆರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಗುರುವಾರ ತಿಳಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಫೆಬ್ರವರಿ 1ರಿಂದ 9ನೇ ತರಗತಿ, ಪ್ರಥಮ ಪಿಯುಸಿ ತರಗತಿಗಳನ್ನು ಆರಂಭ ಮಾಡಲು ತೀರ್ಮಾನಿಸಿದ್ದು, 9, 10, 11 ಮತ್ತು 12ನೇ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಪುನರಾರಂಭವಾಗಲಿವೆ ಎಂದರು.
6 ರಿಂದ 8ನೇ ತರಗತಿಗಳನ್ನು ಆರಂಭಿಸುವ ಬಗ್ಗೆ ಸ್ವಲ್ಪ ದಿನ ಕಾದು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
1 ರಿಂದ 5ನೇ ತರಗತಿಗಳನ್ನು ಆರಂಭಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನವಿಲ್ಲ. ಉಳಿದ ತರಗತಿಗಳನ್ನು ಆರಂಭಿಸುವ ಬಗ್ಗೆ ಮುಂದೆ ನಿರ್ಧರಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ