ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಅಥವಾ ರಾತ್ರಿ ಕರ್ಫ್ಯೂ ಹೇರುವ ಯಾವುದೇ ಉದ್ಧೇಶ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಸೋಂಕು ಹರಡುವುದನ್ನು ತಡೆಯಲು ಮದುವೆ, ಬರ್ತ್ ಡೇ ಪಾರ್ಟಿ ಮತ್ತಿತರ ಕಾರ್ಯಕ್ರಮಗಳು ಸೇರಿದಂತೆ ಎಲ್ಲ ರೀತಿಯ ಒಳಾಂಗಣ ಚಟುವಟಿಕೆಗಳಿಗೆ ಕಠಿಣ ಮಾರ್ಗಸೂಚಿ ರಚಿಸಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಆದರೆ, ಹೊರಾಂಗಣ ಕಾರ್ಯಕ್ರಮಗಳಿಗೆ ಹೆಚ್ಚಿನ ನಿರ್ಬಂಧಗಳಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿ ನಡೆಸುತ್ತಿರುವ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, “ಕೋವಿಡ್ -19 ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸುವ, ಹೆಚ್ಚಿನ ಜನ ಸೇರುವ ದೊಡ್ಡ ಕಾರ್ಯಕ್ರಮಗಳನ್ನು ಸರ್ಕಾರ ಕಟ್ಟುನಿಟ್ಟಾಗಿ ನಿಯಂತ್ರಿಸುತ್ತದೆ” ಎಂದು ಹೇಳಿದರು. ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಮತದಾನದ ಹಿನ್ನೆಲೆಯಲ್ಲಿ ಹೆಚ್ಚಿನ ಜನ ಸೇರುವ ಸಾಧ್ಯತೆ ಬಗ್ಗೆ ಕೇಳಿದಾಗ, ಹೊರಾಂಗಣ ಚಟುವಟಿಕೆಗಳಿಗೆ ಹೆಚ್ಚಿನ ನಿರ್ಬಂಧಗಳಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.
“ನಮ್ಮ ಗಮನವು ನಾಲ್ಕು ಗೋಡೆಗಳ ಒಳಗೆ ನಡೆಯುವ ಹೆಚ್ಚು ಜನ ಸೇರುವ ದೊಡ್ಡ ಪಾರ್ಟಿಗಳನ್ನು ನಿಯಂತ್ರಿಸುವುದರ ಮೇಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವವರ ಸಂಖ್ಯೆ ಸೇರಿದಂತೆ ಕೋವಿಡ್ ನಿಯಮಗಳನ್ನು ಉಲ್ಲಂಘಿಸುವ ಯಾವುದೇ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಮಾಸ್ಕ್ ಧರಿಸುವುದು ಕಡ್ಡಾಯ ನಿಯಮ ಬಿಟ್ಟರೆ ಹೊರಾಂಗಣ ಚಟುವಟಿಕೆಗಳಿಗೆ ಹೆಚ್ಚಿನ ನಿರ್ಬಂಧಗಳಿಲ್ಲ ” ಎಂದು ಯಡಿಯೂರಪ್ಪ ವಿವರಿಸಿದರು.
ಇದೇವೇಳೆ, ಎರಡಕ್ಕಿಂತ ಹೆಚ್ಚು ಕೋವಿಡ್ ಪ್ರಕರೆಣಗಳು ಕಂಡುಬಂದ ಪ್ರದೇಶವನ್ನು ಮೈಕ್ರೋ ಕಂಟೈನ್ಮೆಂಟ್ ಜೋನ್ ಆಗಿ ಘೋಷಿಸಲು ಯೋಜಿಸಲಾಗಿದೆ.