janadhvani

Kannada Online News Paper

11 ಜಿಲ್ಲೆಗಳಲ್ಲಿ ಜೂ.21ರ ವರೆಗೆ ಲಾಕ್‌ಡೌನ್ ವಿಸ್ತರಣೆ- ವಾರಾಂತ್ಯ ಕರ್ಫ್ಯೂ ಜಾರಿ- ಸಿ.ಎಂ

ಬೆಂಗಳೂರು,ಜೂ.10: ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ 11 ಜಿಲ್ಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಲಾಕ್ಡೌನ್ ಅನ್ನು ಜೂ. 21ರವರೆಗೆ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ಲಾಕ್ಡೌನ್ ಸಡಿಲಿಕೆ ಕುರಿತು ಇಂದು ಅಧಿಕಾರಿಗಳು, ಸಚಿವರು, ತಜ್ಞರೊಂದಿಗೆ ಅವರು ಸಭೆ ನಡೆಸಿದರು.

ಇದಾದ ಬಳಿಕ ಮಾತನಾಡಿರುವ ಅವರು. ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆ ಹೊರತು ಪಡಿಸಿ ನಿರ್ಬಂಧ ಸಡಿಲಿಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಸೋಂಕಿನ ದರ ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರೆಯಲಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಸಲಾಗಿದೆ. ರಾಜ್ಯಾದ್ಯಾಂತ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ. ಇದರ ಜೊತೆ ಪ್ರತಿನಿತ್ಯ ರಾತ್ರಿ ಕರ್ಫ್ಯೂ ಕೂಡ ಜಾರಿಯಲ್ಲಿರಲಿದೆ. ಅಂತರ ಜಿಲ್ಲೆ ಸಂಚಾರಕ್ಕೆ ಅವಕಾಶವಿದ್ದು, ಅಂತರ್ ರಾಜ್ಯ ಸಂಚಾರಕ್ಕೆ ನಿರ್ಬಂಧ ಇರಲಿದೆ ಎಂದು ಅವರು ತಿಳಿಸಿದರು.

ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧ ಗಳಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದ ಅವರು ಪಾಸಿಟಿವಿಟಿ ಹೆಚ್ಚಿರುವ 11 ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರೆಯಲಿದೆ ಎಂದರು.

ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಈಗಿರುವಂತೆ ಲಾಕ್ಡೌನ್ ಮಾರ್ಗಸೂಚಿಯನ್ನು ಜೂ 21ರವರೆಗೆ ಮುಂದುವರೆಸಬೇಕು. ಇದರಲ್ಲಿ ಯಾವುದೇ ಬದಾವಣೆ ಇಲ್ಲ. ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದರು.

ಉಳಿದ 19 ಜಿಲ್ಲೆಗಳಲ್ಲಿ ಈಗಾಗಲೇ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಕೆಲವು ಸಡಿಲಿಕೆ ಮಾಡಲಾಗಿದೆ. ಇದರ ಜೊತೆ ವಾರಾಂತ್ಯದಲ್ಲಿ ಕರ್ಫ್ಯೂ ಮುಂದುವರೆಯಲಿದೆ. ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2ರವರೆಗೂ ಅವಕಾಶ ನೀಡಲಾಗಿದೆ

ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.

  • ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
  • ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿರ್ಮಾಣ ಚಟುವಟಿಕೆ ಸಂಬಂಧಿಸಿದ ಅಂಗಡಿಗಳನ್ನು ಅದರಲ್ಲೂ ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ಅಂಗಡಿ ತೆರೆಯಲು ಅವಕಾಶ ನಿಡಲಾಗಿದೆ.
  • ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.
  • ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.
  • ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.
  • ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
  • ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಉಳಿದಂತೆ ವಿವರವಾದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು. ಈ ನಿಯಮಗಳನ್ನು ಜನರು ಕಟ್ಟು ನಿಟ್ಟಾಗಿ ಪಾಲಿಸಬೇಕು. ಈ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಇದೇ ವೇಳೆ ಅವರು ಮನವಿ ಮಾಡಿದರು.

error: Content is protected !! Not allowed copy content from janadhvani.com