ಬೆಂಗಳೂರು, ಆ.18: ಕೊರೋನಾ ಆತಂಕದ ನಡುವೆಯೇ ನಾಳೆಯಿಂದ ಅಂದರೆ ಆಗಸ್ಟ್ 19ರಿಂದ ದ್ವಿತೀಯ ಪರೀಕ್ಷೆ ಪ್ರಾರಂಭವಾಗಲಿದೆ. ಹೀಗಾಗಿ ಪಿಯು ಬೋರ್ಡ್ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕೊರೋನಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ದ್ವಿತೀಯ ಪಿಯು ಪರೀಕ್ಷೆ ಬಗ್ಗೆ ಮಾಹಿತಿ ನೀಡಿದ್ದಾರೆ. ಆಗಸ್ಟ್ 19ರಿಂದ ಸೆಪ್ಟೆಂಬರ್ 3 ರವರೆಗೆ ಸೆಕೆಂಡ್ ಪಿಯು ಪರೀಕ್ಷೆ ಜರುಗಲಿದೆ. ಈ ಬಾರಿ 18 ಸಾವಿರದ 414 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಲ್ಲಿ 17469 ಖಾಸಗಿ ವಿದ್ಯಾರ್ಥಿಗಳು, 352 ರಿಪೀಟರ್ಸ್ , 5093 ಪ್ರೆಶರ್ಸ್ ವಿದ್ಯಾರ್ಥಿಗಳು ಇದ್ದಾರೆ ಎಂದು ಹೇಳಿದರು.
ರಾಜ್ಯದ 187 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತೆ. ಕೋವಿಡ್ ಸೋಂಕು ಇದ್ರೆ ಕೂಡಲೇ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಕೋವಿಡ್ ಸೋಂಕಿತರಿಗೂ ಪರೀಕ್ಷೆ ಬರೆಯಲು ಅವಕಾಶ ಇರುತ್ತೆ ಎಂದು ತಿಳಿಸಿದರು.
ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿಗಳಿಗೆ RT-PCR ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ. ಕೇರಳ ಗಡಿ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳು ಕೂಡ RT-PCR ಟೆಸ್ಟ್‌ನ್ನು ಕಡ್ಡಾಯವಾಗಿ ಮಾಡಿಸಿಕೊಂಡು ನೆಗೆಟಿವ್ ರಿಪೋರ್ಟ್ ತರಬೇಕಿದೆ. 72 ಗಂಟೆಗಳ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ನಿರ್ದೇಶಕಿ ಸ್ನೇಹಲ್ ಹೇಳಿದ್ದಾರೆ.
ಒಂದು ಪರೀಕ್ಷಾ ಕೊಠಡಿಯಲ್ಲಿ ಹತ್ತು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಒಂದು ಡೆಸ್ಕ್ನಲ್ಲಿ ಒಬ್ಬರಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ. ಇನ್ನು, ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುತ್ತದೆ.
ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯಲು ಪಿಯು ಬೋರ್ಡ್ ಎಲ್ಲಾ ವ್ಯವಸ್ಥೆಯನ್ನು ಮಾಡಿದೆ. ಪರೀಕ್ಷೆ ಬರೆಯುವ ಮುನ್ನ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಇದುವರೆಗೆ ಪರೀಕ್ಷೆ ಬರೆಯುವ ಯಾವ ವಿದ್ಯಾರ್ಥಿಯೂ ಕೊರೋನಾ ಸೋಂಕಿನ ಕುರಿತು ಮಾಹಿತಿ ನೀಡಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ಸ್ಪಷ್ಟ ಪಡಿಸಿದರು.