janadhvani

Kannada Online News Paper

ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ- ವೀಕೆಂಡ್ ಕರ್ಫ್ಯೂ ರದ್ದು

ಆಸ್ಪತ್ರೆ ದಾಖಲಾತಿ ಹೆಚ್ಚಾದರೆ ಮತ್ತೆ ವಾರಾಂತ್ಯದ ಕರ್ಫ್ಯೂ ಕುರಿತು ನಿರ್ಧರಿಸುವ ಸಾಧ್ಯತೆ ಇದೆ.

ಬೆಂಗಳೂರು,ಜ.21: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದು, ನೈಟ್ ಕರ್ಫ್ಯೂವನ್ನು ಮುಂದುವರೆಸಲಾಗಿದೆ.

ಕೋವಿಡ್ ನಿಯಂತ್ರಣ ಸಂಬಂಧ ಪ್ರಸ್ತುತ ಇರುವ ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇತರ ನಿರ್ಧಾರಗಳ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ತಜ್ಞರು, ಅಧಿಕಾರಿಗಳು ಹಾಗೂ ಸಚಿವರು ಭಾಗಿಯಾಗಿದ್ದರು. ಸಭೆಯಲ್ಲಿ ತಜ್ಞರ ಸಲಹೆ ಮೇರೆಗೆ ವಾರಾಂತ್ಯ ಕರ್ಫ್ಯೂ ನಿರ್ಧಾರವನ್ನು ಹಿಂಪಡೆಯಲಾಗಿದ್ದು, ನೈಟ್ ಕರ್ಫ್ಯೂವನ್ನು ಪ್ರತಿದಿನ ಮುಂದುವರೆಸಲು ನಿರ್ಧರಿಸಲಾಗಿದೆ.

ಬೆಂಗಳೂರು ಹೊರತುಪಡಿಸಿ ರಾಜ್ಯದಾದ್ಯಂತ ಶಾಲೆಗಳನ್ನು ತೆರೆಯಬಹುದು
ಇನ್ನು ಸೋಂಕು ಪ್ರಮಾಣ ಹೆಚ್ಚಿರುವ ಬೆಂಗಳೂರು ಹೊರತು ಪಡಿಸಿ ರಾಜ್ಯದಾದ್ಯಂತ ಶಾಲೆಗಳನ್ನು ತೆರೆಯಬಹುದು ಎಂದು ಹೇಳಲಾಗಿದ್ದು, ಕಡಿಮೆ ಪಾಸಿಟಿವ್ ಪ್ರಕರಣಗಳಿರುವ ಇತರೆ ಜಿಲ್ಲೆಗಳಲ್ಲಿ ಶಾಲೆಗಳನ್ನು ತೆರೆಯಲಾಗುವುದು ಎಂದು ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದಾರೆ.

ತಜ್ಞರು, ಸಚಿವರು ಮತ್ತು ಅಧಿಕಾರಿಗಳೊಂದಿಗೆ 2.5 ಗಂಟೆಗಳ ಕಾಲ ನಡೆದ ಸಭೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ವಾರಾಂತ್ಯದ ಕರ್ಫ್ಯೂ ಹಿಂತೆಗೆದುಕೊಳ್ಳಲು ನಿರ್ಧರಿಸಿತು. ಆದಾಗ್ಯೂ ಆಸ್ಪತ್ರೆ ದಾಖಲಾತಿ ಹೆಚ್ಚಾದರೆ ಮತ್ತೆ ವಾರಾಂತ್ಯದ ಕರ್ಫ್ಯೂ ಕುರಿತು ನಿರ್ಧರಿಸುವ ಸಾಧ್ಯತೆ ಇದೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್, ತಜ್ಞರ ಸಲಹೆಗಳ ಪ್ರಕಾರ, ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಆಸ್ಪತ್ರೆಗೆ ದಾಖಲಾಗುವುದು ಶೇಕಡಾ ಐದಕ್ಕಿಂತ ಕಡಿಮೆ ಇದೆ. ಇದನ್ನೇ ಮಾನದಂಡವಾಗಿಟ್ಟುಕೊಂಡು ವಾರಾಂತ್ಯದ ಕರ್ಫ್ಯೂ ಹಿಂಪಡೆಯಲು ಸಿಎಂ ಅವರು ಅಭಿಪ್ರಾಯಪಟ್ಟಿದ್ದಾರೆ. ಆದಾಗ್ಯೂ ಕೋವಿಡ್ ಪ್ರಕರಣಗಳು ಮತ್ತಷ್ಟು ಹೆಚ್ಚಾಗುತ್ತವೆ, ಆಸ್ಪತ್ರೆಗೆ ದಾಖಲಾಗುವ ಪ್ರಕರಣಗಳು ಹೆಚ್ಚಾದರೆ ಮಾತ್ರ ಮತ್ತೆ ವಾರಾಂತ್ಯದ ಕರ್ಫ್ಯೂ ಹೇರುವ ಕುರಿತು ಪರಿಶೀಲಿಸ ಬೇಕಾಗಬಹುದು ಎಂದು ಅವರು ಹೇಳಿದರು.

error: Content is protected !! Not allowed copy content from janadhvani.com