janadhvani

Kannada Online News Paper

ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಭಯೋತ್ಪಾದಕ ಆದಿತ್ಯರಾವ್‌ಗೆ 20 ವರ್ಷ ಜೈಲು

ಸ್ಫೋಟಕ ತಡೆ ಕಾಯ್ದೆಯಡಿ 5 ವರ್ಷ ಹಾಗೂ ಯುಎಪಿಎ ಕಾಯ್ದೆಯಡಿ 20 ವರ್ಷ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯರಾವ್‌ಗೆ ದಕ್ಷಿಣ ಕನ್ನಡ ಜಿಲ್ಲಾ ನಾಲ್ಕನೇ ಹೆಚ್ಚುವರಿ ನ್ಯಾಯಾಲಯವು 20 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಸ್ಫೋಟಕ ತಡೆ ಕಾಯ್ದೆಯಡಿ 5 ವರ್ಷ ಹಾಗೂ ಯುಎಪಿಎ ಕಾಯ್ದೆಯಡಿ 20 ವರ್ಷ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಘಟನೆಯ ವಿವರ

ರಿಕ್ಷಾವೊಂದರಲ್ಲಿ ಚಾಲಕ ಸೇರಿದಂತೆ ಇಬ್ಬರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಆ ಪೈಕಿ ಆದಿತ್ಯ ರಾವ್ ಆಟೋ ರಿಕ್ಷಾದಿಂದ ಇಳಿದು ಸ್ಫೋಟಕ ತುಂಬಿದ ಬ್ಯಾಗನ್ನು ನಿರ್ಗಮನ ದ್ವಾರದ ಸಮೀಪದ ಟಿಕೆಟ್ ಕೌಂಟರ್ ಬಳಿಯಿರುವ ಆಸನದ ಮೇಲಿರಿಸಿ ಅಲ್ಲಿಂದ ಕಾಲ್ಕಿತ್ತಿರುವುದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿತ್ತು.

ಆ ಬಳಿಕ ಆರೋಪಿ ಆದಿತ್ಯ ರಾವ್ ಬೆಂಗಳೂರಿಗೆ ತೆರಳಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಶರಣಾಗಿದ್ದ. ಆತನನ್ನು ಹಲಸೂರು ಗೇಟ್ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು. ನಂತರ ಮಂಗಳೂರು ಪೊಲೀಸ್ ತಂಡ ಬೆಂಗಳೂರಿಗೆ ತೆರಳಿ ಆತನನ್ನು ಬಂಧಿಸಿ ಮಂಗಳೂರಿಗೆ ಕರೆ ತಂದಿತ್ತು.

ವಿಮಾನ ನಿಲ್ದಾಣದಲ್ಲಿ ಆತ ಇರಿಸಿ ಹೋಗಿದ್ದ ಬ್ಯಾಗಿನಲ್ಲಿ ಕಂಡು ಬಂದ ಶಂಕಾಸ್ಪದ ವಸ್ತುಗಳು ಸ್ಫೋಟಕಗಳಾಗಿತ್ತು ಎಂಬುದು ಎಫ್ ಎಸ್ಎಲ್ ಪರೀಕ್ಷೆಯಿಂದ ಸಾಬೀತಾಗಿತ್ತು. ಆದಿತ್ಯ ರಾವ್ ವಿರುದ್ಧ 700 ಪುಟಗಳ ದೋಷಾರೋಪಣಾ ಪಟ್ಟಿಯನ್ನು ತನಿಖಾಧಿಕಾರಿಗಳು ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಆದಿತ್ಯ ರಾವ್ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅನ್ವಯ ಪ್ರಕರಣ ದಾಖಲಿಸಿ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು. ಇದೀಗ ನ್ಯಾಯಾಲಯ ಆತನನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿ 20 ವರ್ಷ ಜೈಲು ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ.

error: Content is protected !! Not allowed copy content from janadhvani.com