ಮಂಗಳೂರು : ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುತ್ತಿರುವ ಖಾಸಗಿ ಶಾಲೆಗಳ ವಿದ್ಯಾರ್ಥಿನಿಯರು ಆಯಾ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಬರೆಯಬಹುದಾಗಿದೆ. ಇದು ಖಾಸಗಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಮಾತ್ರ ಅನ್ವಯವಾಗಲಿದೆ. ಸರಕಾರಿ ಶಾಲೆಗಳ ವಿದ್ಯಾರ್ಥಿನಿ ಯರು ಸರಕಾರ ರೂಪಿಸಿದ ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸ್ಪಷ್ಟಪಡಿಸಿದ್ದಾರೆ.
ಮಾ.25ರ ರಾಜ್ಯ ಸರಕಾರದ ಆದೇಶದಂತೆ ಪರೀಕ್ಷಾ ಕೇಂದ್ರಗಳಿಗೆ ಸರಕಾರಿ/ಅನುದಾನಿತ ಶಾಲೆಗಳ ವಿದ್ಯಾರ್ಥಿನಿಯರು ಸರಕಾರ ನಿಗದಿಪಡಿಸಿದ ಸಮವಸ್ತ್ರದಲ್ಲಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಆಡಳಿತ ಮಂಡಳಿ ನಿಗದಿಪಡಿಸಿದ ಸಮವಸ್ತ್ರವನ್ನು ಧರಿಸಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಅವಕಾಶವಿದೆ ಎಂದು ಡಿಸಿ ತಿಳಿಸಿದ್ದಾರೆ.
ಅಲ್ಲದೆ ಹಿಜಾಬ್ ಸಮವಸ್ತ್ರವನ್ನಾಗಿ ಹೊಂದಿರುವ ಶಾಲೆಗಳ ವಿದ್ಯಾರ್ಥಿಗಳು ಯಾವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲಿದ್ದಾರೆ ಎಂಬ ಮಾಹಿತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪಡೆದು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.
ಈಗಾಗಲೆ ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸುತ್ತಿರುವ ವಿದ್ಯಾರ್ಥಿನಿಯರು ಶಾಲಾ ಮುಖ್ಯಸ್ಥರ ಸಹಿಯುಳ್ಳ ಪತ್ರವನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ತೋರಿಸಿ ಪರೀಕ್ಷೆ ಬರೆಯಬಹುದಾಗಿದೆ ಎಂದು ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಮೂಸಬ್ಬ ಬ್ಯಾರಿ ತಿಳಿಸಿದ್ದಾರೆ.