janadhvani

Kannada Online News Paper

ಹಿಜಾಬ್ ತೀರ್ಪು: ನ್ಯಾಯಮೂರ್ತಿಗಳಿಗೆ ಬೆದರಿಕೆ-ಕರ್ನಾಟಕ,ತಮಿಳುನಾಡಿಗೆ ಸುಪ್ರೀಂಕೋರ್ಟ್ ನೋಟಿಸ್‌

ರಹಮತ್‌ ಉಲ್ಲಾ ಮತ್ತು ಜಮಾಲ್ ಮೊಹಮ್ಮದ್ ಉಸ್ಮಾನಿ ವಿರುದ್ಧ ತಮಿಳುನಾಡು ಪೊಲೀಸರು ಮೊದಲು ಪ್ರಕರಣ ದಾಖಲಿಸಿಕೊಂಡು, ಬಂಧಿಸಿದ್ದರು. ನಂತರ ಇವರನ್ನು ಬೆಂಗಳೂರು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು, ತನಿಖೆ ನಡೆಸುತ್ತಿದ್ದಾರೆ.

ನವದೆಹಲಿ: ಹಿಜಾಬ್ ತೀರ್ಪು ಸಂಬಂಧ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ರದ್ದುಪಡಿಸಲು ಅಥವಾ ತಮ್ಮ ರಾಜ್ಯಕ್ಕೆ ಪ್ರಕರಣ ವರ್ಗಾಯಿಸುವಂತೆ ಚೆನ್ನೈ ನಿವಾಸಿ, ತಮಿಳುನಾಡು ತೌಹೀದ್ ಜಮಾತ್ ಸಂಘಟನೆಯ ಸದಸ್ಯ ಸಲ್ಲಿಸಿರುವ ಮನವಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳಿಗೆ ನೋಟಿಸ್‌ ನೀಡಿದೆ.

ಆರೋಪಿ ಕೋವೈ ರಹಮತ್‌ ಉಲ್ಲಾ ಎಂಬುವವರು, ‘ಇದೇ ವಿಷಯಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಈಗಾಗಲೇ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಎರಡು ವಿಭಿನ್ನ ತನಿಖಾ ಸಂಸ್ಥೆಗಳು, ಎರಡೂ ಎಫ್‌ಐಆರ್‌ಗಳಲ್ಲಿ ಪರ್ಯಾಯ ತನಿಖೆ ನಡೆಸುವುದು ಸರಿಯಲ್ಲ. ಇದು ಕಾನೂನು ದುರುಪಯೋಗಕ್ಕೆ ಸಮಾನ’ ಎಂದು ವಾದಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

‘ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿ ಎರಡು ರಾಜ್ಯಗಳ ವಿವಿಧ ನ್ಯಾಯಾಲಯಗಳು ಮತ್ತು ಪೊಲೀಸ್ ಠಾಣೆಗಳನ್ನು ಸಂಪರ್ಕಿಸುವುದು ಅಸಾಧ್ಯ. ಅರ್ಜಿದಾರರು ತೀವ್ರ ಸಂಕಷ್ಟ ಅನುಭವಿಸಬೇಕಾಗುತ್ತದೆ’ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಬೇಲಾ ಎಂ. ತ್ರಿವೇದಿ ಅವರಿದ್ದ ಪೀಠವು, ಈ ಅರ್ಜಿ ಸಂಬಂಧ ಎರಡೂ ರಾಜ್ಯಗಳ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ್ದಕ್ಕಾಗಿ ತಮಿಳುನಾಡು ತೌಹೀದ್ ಜಮಾತ್ (ಟಿಎನ್‌ಟಿಜೆ)ನ ರಹಮತ್‌ ಉಲ್ಲಾ ಮತ್ತು ಜಮಾಲ್ ಮೊಹಮ್ಮದ್ ಉಸ್ಮಾನಿ ವಿರುದ್ಧ ತಮಿಳುನಾಡು ಪೊಲೀಸರು ಮೊದಲು ಪ್ರಕರಣ ದಾಖಲಿಸಿಕೊಂಡು, ಬಂಧಿಸಿದ್ದರು. ನಂತರ ಇವರನ್ನು ಬೆಂಗಳೂರು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು, ತನಿಖೆ ನಡೆಸುತ್ತಿದ್ದಾರೆ.

ಅರ್ಜಿದಾರರ ಮೇಲೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಇದೆ. ಇದೇ ವರ್ಷದ ಮಾರ್ಚ್ 18ರಂದು ತಮಿಳುನಾಡಿನ ಮಧುರೈನಲ್ಲಿ ಇವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಮಾರ್ಚ್ 19ರಂದು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪರಾಧಗಳಿಗಾಗಿ ಎರಡನೇ ಎಫ್‌ಐಆರ್ ದಾಖಲಾಗಿದೆ.

error: Content is protected !! Not allowed copy content from janadhvani.com