janadhvani

Kannada Online News Paper

ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇಡಬೇಡಿ- ಮಾಜಿ ಸಿಎಂ ಬಿ.ಎಸ್.ವೈ

ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಕೋರುತ್ತೇನೆ ಎಂದು ಬರೆದಿದ್ದಾರೆ.

ಬೆಂಗಳೂರು: ಯಾವುದೇ ಕಾರಣಕ್ಕೂ ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇಡಬೇಡಿ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಈ ಸಂಬಂಧ ಸಿಎಂಗೆ ಪತ್ರ ಬರೆದಿರೋ ಬಿಎಸ್​ವೈ, ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚೆಗೆ ತಾವು ವೀಕ್ಷಣೆ ಮಾಡಿದ್ದೀರಿ. ಅಲ್ಲದೇ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನ ತ್ವರಿತವಾಗಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ ನಿಮಗೆ ಧನ್ಯವಾದಗಳು ಎಂದಿದ್ದಾರೆ.

ಶಿವಮೊಗ್ಗದ ಈ ಹೊಸ ವಿಮಾನ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸಿರುತ್ತೀರಿ. ತಮ್ಮ ಈ ವಿಶೇಷವಾದ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಸಂಘ ಸಂಸ್ಥೆಗಳು ಹಾಗೂ ಎಲ್ಲ ಮುಖಂಡರುಗಳಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ ಹಾಗೂ ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು. ಈ ಹಿನ್ನೆಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ. ಆದುದರಿಂದ, ತಮ್ಮ ಈ ನಿರ್ಧಾರವನ್ನು ಪುನರ್‌ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ. ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಕೋರುತ್ತೇನೆ ಎಂದು ಬರೆದಿದ್ದಾರೆ.

ಈ ಹಿಂದೆ ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರೋ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದ ಸಿಎಂ ಕಾಮಗಾರಿ ಪರಿಶೀಲನೆ ನಡೆಸಿದ್ದರು. ಬಳಿಕ ಮಾತಾಡಿದ ಬಸವರಾಜ ಬೊಮ್ಮಾಯಿ, ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೆಸರು ಇಡಲು ಸಚಿವ ಸಂಪುಟ ತೀರ್ಮಾನಿಸಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗಿದೆ ಎಂದಿದ್ದರು.

error: Content is protected !! Not allowed copy content from janadhvani.com