ಮುಂಬೈ: ಹನುಮಾನ್ ಚಾಲೀಸಾ ವಿವಾದಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಸ್ವತಂತ್ರ ಸಂಸದೆ ನವನೀತ್ ಮತ್ತು ಅವರ ಶಾಸಕ ಪತಿ ರವಿ ರಾಣಾ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಪೊಲೀಸ್ ಅಧಿಕಾರಿಯ ಅಧಿಕೃತ ಕರ್ತವ್ಯವನ್ನು ನಿರ್ವಹಿಸದಂತೆ ತಡೆದ ಆರೋಪದ ಮೇಲೆ ನಗರದ ಖಾರ್ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ರದ್ದುಗೊಳಿಸಬೇಕೆಂದು ಕೋರಿ ದಂಪತಿಗಳು ಹೈಕೋರ್ಟ್ ಮೊರೆ ಹೋಗಿದ್ದರು.
ಆದರೆ ನ್ಯಾಯಮೂರ್ತಿಗಳಾದ ಪಿಬಿ ವರಾಳೆ ಮತ್ತು ಎಸ್‌ಎಂ ಮೋದಕ್ ಅವರ ಪೀಠವು ಅರ್ಜಿಯಲ್ಲಿ ಯಾವುದೇ ಅರ್ಹತೆ ಕಂಡುಬಂದಿಲ್ಲ ಎಂದು ಹೇಳಿದೆ. ಮುಂಬೈನಲ್ಲಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸದ ಹೊರಗೆ ಹನುಮಾನ್ ಚಾಲೀಸಾವನ್ನು ಪಠಿಸಲಾಗುವುದು ಎಂದು ಘೋಷಿಸಿದ ನಂತರ ಖಾರ್ ಪೊಲೀಸರು ದಂಪತಿಗಳ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ದಂಪತಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.







