ನವದೆಹಲಿ,ಏ.26: ಹಿಜಾಬ್ ವಿವಾದ ಕುರಿತಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ಮತ್ತೆ ಮುಂದೂಡಿದೆ. ಹಿಜಾಬ್ ವಿವಾದ ಕುರಿತ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಪೀಠದ ಮುಂದೆ ನಡೆಯಿತು. ಇನ್ನೂ ಎರಡು ದಿನ ಕಾಯಿರಿ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿ ವಿಚಾರಣೆ ಮುಂದೂಡಿದೆ.
ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಮುಂದೆ ಪ್ರಸ್ತಾಪಿಸಲಾಗಿತ್ತು. ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಈ ವಿಷಯ ಪ್ರಸ್ತಾಪಿಸಿದರು. ಇನ್ನೂ ಎರಡು ದಿನದ ನಂತರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಮುಖ್ಯ ನ್ಯಾಯಮೂರ್ತಿಗಳು ತಿಳಿಸಿರುವುದಾಗಿ ಬಾರ್ ಅಂಡ್ ಬೆಂಚ್ ವರದಿ ತಿಳಿಸಿದೆ.
ಹಿಜಾಬ್ ಕುರಿತು ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾಗಿರುವ ಮೇಲ್ಮನವಿಗಳನ್ನು ತುರ್ತು ವಿಚಾರಣೆ ನಡೆಸಬೇಕೆಂಬ ಮನವಿಯನ್ನು ಸುಪ್ರೀಂ ಕೋರ್ಟ್ ಕಳೆದ ತಿಂಗಳು ನಿರಾರಕರಿಸಿತ್ತು.ಶಾಲಾ ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿ ಹಿಡಿದು, ಹಿಜಾಬ್ ಗೆ ಅವಕಾಶ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು.