janadhvani

Kannada Online News Paper

ಸುರತ್ಕಲ್ ಫಾಝಿಲ್ ಹತ್ಯೆ: ‘ಕ್ರಿಯೆಗೆ-ಪ್ರತಿಕ್ರಿಯೆ’ ಎಂದ ಸಿಎಂ ಹೇಳಿಕೆ ಪ್ರೇರಣೆ- ಸಿದ್ದರಾಮಯ್ಯ

ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಯ್ಯ ಹೇಳಿದ್ದಾರೆ.

ಬೆಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ಮುಹಮ್ಮದ್ ಫಾಝಿಲ್ ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

‘ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಇಂದು ಸುರತ್ಕಲ್ ನಲ್ಲಿ ಫಾಝಿಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ’ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಯ್ಯ ಹೇಳಿದ್ದಾರೆ.

ಈ ಸಂಬಂಧ ಸರಣಿ ಟ್ವಿಟ್ ಗಳನ್ನು ಮಾಡಿರುವ ಅವರು, ‘ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಇದಕ್ಕೆ ಹೊಣೆಗಾರರು. ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ’ ಎಂದು ಹೇಳಿದ್ದಾರೆ.

‘ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ.
ಮುಖ್ಯಮಂತ್ರಿಗಳು ಗೃಹಸಚಿವ ಸ್ಥಾನದಿಂದ ಆರಗ ಜ್ಞಾನೇಂದ್ರ ಅವರನ್ನು ತಕ್ಷಣ ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು’ ಆತಂಕ ವ್ಯಕ್ತಪಡಿಸಿದ್ದಾರೆ.

‘ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿರುವ ರಾಜ್ಯ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ’ ಎಂದು ಹೇಳಿದ್ದಾರೆ.

‘ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರು ಅವರನ್ನು ಹೆಡೆಮುರಿ ಕಟ್ಟಿ ಜೈಲಿಗೆ ಅಟ್ಟಬೇಕು. ಆದರೆ ರಾಜ್ಯ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಜನಾಕ್ರೋಶವನ್ನು ಶಾಂತಗೊಳಿಸಲು ತನಿಖೆಯ ನೆಪದಲ್ಲಿ ಆರೋಪಿಗಳ ಹೊರತಾಗಿ ಅಮಾಯಕರಿಗೆ ಕಿರುಕುಳ ನೀಡುವುದು ಸಲ್ಲದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳೂರಿನ ಹೊರವಲಯದ ಸುರತ್ಕಲ್ ಮೂಡ ಮಾರುಕಟ್ಟೆ ಸಮೀಪ ಬಟ್ಟೆ ಅಂಗಡಿಯಲ್ಲಿದ್ದ ಮುಹಮ್ಮದ್ ಫಾಝಿಲ್ (23) ಎಂಬ ಯುವಕನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ.

error: Content is protected !! Not allowed copy content from janadhvani.com