janadhvani

Kannada Online News Paper

ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ವಿಧಿವಶ- ಸಿಎಂ ಸಂತಾಪ

ತಮ್ಮ ಸಂಪುಟ ಸಹೋದ್ಯೋಗಿ ಉಮೇಶ್ ಕತ್ತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ

ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಇಂದು ರಾತ್ರಿ 10.30ರ ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.ಸಚಿವ ಉಮೇಶ್ ಕತ್ತಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಒಲವು ಹೊಂದಿದ್ದ ಉಮೇಶ್ ಕತ್ತಿ ಅವರು ಬೆಳಗಾವಿ ಜಿಲ್ಲೆಯ ಹುಕ್ಕೇರಿಯಿಂದ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅಪಾರ ರಾಜಕೀಯ ಅನುಭವ ಹೊಂದಿದ್ದ ಉಮೇಶ್ ಕತ್ತಿ ಅವರು ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ತಾವು ಒಂದಲ್ಲ ಒಂದು ದಿನ ನಾನು ಮುಖ್ಯಮಂತ್ರಿಯಾಗುವುದಾಗಿ ಹಲವು ಬಾರಿ ಹೇಳಿದ್ದರು.

ಸಿಎಂ ಬೊಮ್ಮಾಯಿ ಸಂತಾಪ

ತಮ್ಮ ಸಂಪುಟ ಸಹೋದ್ಯೋಗಿ ಉಮೇಶ್ ಕತ್ತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ, ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

error: Content is protected !! Not allowed copy content from janadhvani.com